ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಗೆಲ್ಲಲು ವಾಲ್ಮೀಕಿ ಹೆಸರು ಬಳಕೆ

Last Updated 27 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

ಹೊಸಪೇಟೆ: ಪ್ರತಿಷ್ಠಿತ ಹಾಗೂ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್‌ ಹಾಗೂ ಬಿಜೆಪಿ, ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ಮತಬೇಟೆ ನಡೆಸಿವೆ.

‘ಮಹರ್ಷಿ ವಾಲ್ಮೀಕಿ ಅವರ ಜಯಂತಿಗೆ ರಜೆ ಘೋಷಿಸಿದ್ದು ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ. ವಿಧಾನಸೌಧದ ಎದುರು ವಾಲ್ಮೀಕಿ ಅವರ ಪ್ರತಿಮೆ ಪ್ರತಿಷ್ಠಾಪಿಸುವ ಬಗ್ಗೆ ಚಿಂತನೆ ನಡೆದಿದ್ದು ನಮ್ಮ ಸರ್ಕಾರದ ಅವಧಿಯಲ್ಲಿ. ಆ ವರ್ಗಕ್ಕೆ ಸೇರಿದ ಶಾಸಕ ಬಿ. ಶ್ರೀರಾಮುಲು ಅವರನ್ನು ರಾಜ್ಯ ನಾಯಕರಾಗಿ ಬೆಳೆಸಿದ ಕೀರ್ತಿಯೂ ನಮ್ಮ ಪಕ್ಷಕ್ಕೆ ಸಲ್ಲುತ್ತದೆ’ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

‘ರಾಮ ಬೇಡ, ರಾಮಮಂದಿರ ಬೇಡ ಎನ್ನುತ್ತಿರುವ ಕಾಂಗ್ರೆಸ್ಸಿಗರು ಮುಂದೊಂದು ದಿನ ವಾಲ್ಮೀಕಿ ಅವರನ್ನು ಬೇಡ ಎನ್ನಬಹುದು. ವಾಲ್ಮೀಕಿ ಅವರ ರಾಮಾಯಣವನ್ನು ಪ್ರಶ್ನಿಸುವ ಮೂಲಕ ಈ ದೇಶದ ಅಸ್ತಿತ್ವವನ್ನು ಪ್ರಶ್ನಿಸಲು ಹೊರಟಿದ್ದಾರೆ. ಇಂತಹವರು ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ’ ಎಂದು ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಟ್ಟು ಬಿಜೆಪಿಯವರು ಮತ ಯಾಚಿಸುತ್ತಿದ್ದಾರೆ.

ಕಾಂಗ್ರೆಸ್‌ ಕೂಡ ಈ ವಿಚಾರದಲ್ಲಿ ಈ ಹಿಂದೆ ಬಿದ್ದಿಲ್ಲ. ಬಿಜೆಪಿ ಮುಖಂಡರ ಪ್ರತಿಯೊಂದು ಹೇಳಿಕೆಗಳಿಗೆ ತಿರುಗೇಟು ನೀಡಿ, ತಾವು ವಾಲ್ಮೀಕಿ ಸಮಾಜದ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿರುವುದಾಗಿ ಆ ಪಕ್ಷದ ನಾಯಕರು ಹೇಳುತ್ತಿದ್ದಾರೆ.

‘ಬಿಜೆಪಿಯವರು ವಾಲ್ಮೀಕಿ ಅವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಹೊರತು ಆ ಸಮಾಜಕ್ಕೆ ಅವರ ಕೊಡುಗೆ ಏನೂ ಇಲ್ಲ. ವಿಧಾನಸೌಧದ ಎದುರು ವಾಲ್ಮೀಕಿ ಅವರ ಪ್ರತಿಮೆ ಪ್ರತಿಷ್ಠಾಪಿಸಿ ಅವರಿಗೆ ಗೌರವ ಸಲ್ಲಿಸಿದ್ದೇವೆ. ನಾಯಕ ಸಮಾಜದ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಸೇರಿದಂತೆ ಅನೇಕ ಮುಖಂಡರನ್ನು ಬೆಳೆಸಿದ ಕೀರ್ತಿ ತಮ್ಮ ಪಕ್ಷಕ್ಕೆ ಸಲ್ಲುತ್ತದೆ. ಅಷ್ಟೇ ಅಲ್ಲ, ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ನಮ್ಮ ಸರ್ಕಾರ ಮೀಸಲಿಟ್ಟಷ್ಟು ಹಣ ದೇಶದಲ್ಲಿ ಯಾವ ರಾಜ್ಯವೂ ಕೊಟ್ಟಿಲ್ಲ’ ಎಂದು ಕಾಂಗ್ರೆಸ್‌ ಮುಖಂಡರು ಹೇಳಿಕೊಳ್ಳುತ್ತಿದ್ದಾರೆ.

‘ಬಿಜೆಪಿಯವರಿಗೆ ವಾಲ್ಮೀಕಿ ನಾಯಕ ಸಮಾಜ ಸೇರಿದಂತೆ ಹಿಂದುಳಿದ ವರ್ಗದವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಹೀಗಾಗಿಯೇ ಅವರು ಸಂವಿಧಾನ ಬದಲಿಸುವ ಮಾತುಗಳನ್ನು ಆಡುತ್ತಾರೆ. ಒಂದುವೇಳೆ ಅವರಿಗೆ ನಿಜವಾದ ಕಾಳಜಿ ಇದ್ದಿದ್ದರೆ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿರಲಿಲ್ಲ’ ಎಂದು ತಿರುಗೇಟು ನೀಡುತ್ತಿದ್ದಾರೆ.

ಎರಡೂ ಪಕ್ಷಗಳ ಮುಖಂಡರು ತಮ್ಮದೇ ಆದ ವಾದವನ್ನು ಸಮಾಜದ ಜನರ ಮುಂದಿಡುತ್ತಿದ್ದಾರೆ. ಆದರೆ, ಅಂತಿಮವಾಗಿ ಆ ಸಮಾಜದ ಜನ ಯಾರ ಕೈ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT