ಸೋಮವಾರ, ಜುಲೈ 26, 2021
21 °C

ಜಿಪಂ, ತಾಪಂ ಮೀಸಲಾತಿಗೆ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ರಾಜ್ಯ ಚುನಾವಣೆ ಆಯೋಗವು ಇತ್ತೀಚೆಗೆ ಹೊರಡಿಸಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವರ್ಗೀಕರಣಕ್ಕೆ ಬಳ್ಳಾರಿ–ವಿಜಯನಗರ ಹಿಂದುಳಿದ ವರ್ಗಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಒಕ್ಕೂಟವು ಈ ಸಂಬಂಧ ರಾಜ್ಯ ಚುನಾವಣೆ ಆಯೋಗದ ಕಾರ್ಯದರ್ಶಿಗೆ ಪತ್ರ ಬರೆದಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯು ಅವೈಜ್ಞಾನಿಕ ಹಾಗೂ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ವಿಧಾನಸಭೆ, ಲೋಕಸಭೆಯಲ್ಲಿ ರಾಜಕೀಯ ಪ್ರಾತಿನಿಧ್ಯವಿಲ್ಲದ ಅಸಂಖ್ಯ ಹಿಂದುಳಿದ ಜಾತಿಗಳನ್ನು ಸ್ಥಳೀಯ ಸಂಸ್ಥೆಗಳಿಂದಲೂ ದೂರವಿಡುವ ಹುನ್ನಾರ ಅಡಗಿದೆ ಎಂದು ಒಕ್ಕೂಟದ ಅಧ್ಯಕ್ಷ ವೈ. ಯಮುನೇಶ್‌, ಪ್ರಧಾನ ಕಾರ್ಯದರ್ಶಿ ಯು. ಆಂಜನೇಯಲು ಆತಂಕ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ–ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ 40ಕ್ಕಿಂತ ಹೆಚ್ಚಿದೆ. ಬಳ್ಳಾರಿ ಜಿಲ್ಲೆಯ 24 ಜಿಲ್ಲಾ ಪಂಚಾಯಿತಿಗಳ ಪೈಕಿ ಒಂದು ಸ್ಥಾನ, ತಾಲ್ಲೂಕು ಪಂಚಾಯಿತಿಯ 79 ಸ್ಥಾನಗಳಲ್ಲಿ 3 ಕ್ಷೇತ್ರ ಹಿಂದುಳಿದ ವರ್ಗದವರಿಗೆ ಮೀಸಲಿಡಲಾಗಿದೆ. ಅದೇ ರೀತಿ ವಿಜಯನಗರದ 31 ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಯ 65 ಕ್ಷೇತ್ರಗಳಲ್ಲಿ ತಲಾ 2 ಸ್ಥಾನ ಹಿಂದುಳಿದವರಿಗೆ ಮೀಸಲಿಡಲಾಗಿದೆ. ಹಾಲಿ ಮೀಸಲಾತಿ ಅಧಿಸೂಚನೆ ಹಿಂಪಡೆದು ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಬೇಕು. ಅದರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.