ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿಗೆ ಎರಡು ತಿಂಗಳ ಗಡುವು

110 ಹಳ್ಳಿಗಳಿಗೆ ಕುಡಿಯುವ ನೀರು, ಒಳಚರಂಡಿ ಕಲ್ಪಿಸುವ ಕಾಮಗಾರಿಯಿಂದ ಹದಗೆಟ್ಟ ರಸ್ತೆ * ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಸೂಚನೆ
Last Updated 23 ಫೆಬ್ರುವರಿ 2022, 18:19 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿಗೆ ಸೇರ್ಪಡೆಯಾಗಿದ್ದ 110 ಹಳ್ಳಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಜಲಮಂಡಳಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡಿರುವ ಕಡೆ ಕತ್ತರಿಸಲಾದ ರಸ್ತೆಗಳನ್ನು ಎರಡು ತಿಂಗಳುಗಳ ಒಳಗೆ ದುರಸ್ತಿಪಡಿಸಬೇಕು’ ಎಂದು ಪಾಲಿಕೆಯ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ ವರ್ಚುವಲ್ ರೂಪದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದರು.

‘ದುರಸ್ತಿ ಕಾರ್ಯ ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕು. ದುರಸ್ತಿಗೊಂಡ ರಸ್ತೆಗಳು ದೀರ್ಘ ಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳಬೇಕು. ರಸ್ತೆ ದುರಸ್ತಿ ಹಾಗೂ ಡಾಂಬರೀಕರಣ ಕಾಮಗಾರಿ ಎಲ್ಲೆಲ್ಲಿ ನಡೆಯುತ್ತಿದೆ ಎಂಬ ಕುರಿತು ನಿತ್ಯವೂ ಪಾಲಿಕೆ ಕೇಂದ್ರ ಕಚೇರಿಗೆ ಮಾಹಿತಿ ಸಲ್ಲಿಸಬೇಕು’ ಎಂದರು.

‘ಜಲಮಂಡಳಿಗೆ ಸಂಬಂಧಿಸಿದಂತೆ ಯಾವುದೇ ತಗಾದೆಗಳಿದ್ದರೂ ಅದನ್ನು ಮುಖ್ಯ ಎಂಜಿನಿಯರ್ ಗಮನಕ್ಕೆ ತರಬೇಕು. ಅವರ ಹಂತದಲ್ಲಿ ಬಿಕ್ಕಟ್ಟು ಬಗೆಹರಿಯದಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಕತ್ತರಿಸಲಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಮಳೆಗಾಲ ಆರಂಭವಾಗುವುದಕ್ಕೂ ಮುನ್ನವೇ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದರು.

99 ಕಿ.ಮೀ ರಸ್ತೆ ಡಾಂಬರೀಕರಣ ಬಾಕಿ: 183.38 ಕಿ.ಮೀ ಉದ್ದದ 139 ರಸ್ತೆಗಳನ್ನುರಸ್ತೆ ಮೂಲಸೌಕರ್ಯ ವಿಭಾಗವು ನಿರ್ವಹಿಸುತ್ತಿದೆ. ಈ ಪೈಕಿ 84.14 ಕಿ.ಮೀ ಉದ್ದದ 72 ರಸ್ತೆಗಳ ಡಾಂಬರೀಕರಣ ನಡೆಸಲಾಗಿದೆ. 99.24 ಕಿ.ಮೀ‌ ಉದ್ದದ 67 ರಸ್ತೆಗಳ ಡಾಂಬರೀಕರಣ ಪ್ರಗತಿಯಲ್ಲಿದೆ ಎಂದು ಈ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.

‘ಬಾಕಿ ಇರುವ ಡಾಂಬರೀಕರಣ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಸಬೇಕು’ ಎಂದು ಅಧಿಕಾರಿಗಳಿಗೆ ಗೌರವ್‌ ಗುಪ್ತ ಸೂಚನೆ ನೀಡಿದರು.

96 ಕಿ.ಮೀ ರಾಜಕಾಲುವೆ ಅಭಿವೃದ್ಧಿ: ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿ ಅಡಿ 113 ಕಿ.ಮೀ ಉದ್ದದಷ್ಟು ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಅದರಲ್ಲಿ ಈಗಾಗಲೇ 96 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಬಾಕಿ ಉಳಿದ 17 ಕಿ.ಮೀ ಉದ್ದದ ರಾಜಕಾಲುವೆ ದುರಸ್ತಿ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು’ ಎಂದು ಮುಖ್ಯ ಆಯುಕ್ತರು ಗಡುವು ನಿಗದಿಪಡಿಸಿದರು.

ಸಭೆಯಲ್ಲಿ ವಿಶೇಷ ಆಯುಕ್ತ ಮನೋಜ್ ಜೈನ್, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್‌.ಪ್ರಹ್ಲಾದ್, ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್ ಸುಗುಣಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT