ಮಂಗಳವಾರ, ಜೂನ್ 28, 2022
23 °C

ಬಿಬಿಎಂಪಿ: 331 ಪ್ರಕರಣ ಡೆಂಗಿ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 331 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. ಈ ರೋಗ ಹರಡದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿಯ ಆರೋಗ್ಯ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ನಗರದಲ್ಲಿ ಡೆಂಗಿ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡಿದರು.

‘ಮಳೆ ನೀರು ಎಲ್ಲೂ ನಿಲ್ಲದಂತೆ ನೋಡಿಕೊಳ್ಳಬೇಕು. ರೋಗ ನಿಯಂತ್ರಣದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಸ ಸಾಗಿರುವ ವಿಭಾಗದ ಆಟೊಟಿಪ್ಪರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಗಿ ನಿಯಂತ್ರಿಸುವ ಬಗ್ಗೆ ಅರಿವು ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್‌ ‘ಕಿರಿಯ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ಆಗುವ ತಾಣಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಸೊಳ್ಳೆಯ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಲಿದ್ದಾರೆ. ಇವುಗಳನ್ನು ನಾಶಪಡಿಸಲು ಗ್ಯಾಂಗ್‌ಮ್ಯಾನ್‌ಗಳು ಕ್ರಮಕೈಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೊಳ್ಳೆ ನಿಯಂತ್ರಣದ ಸಾಧನಗಳು ಹಾಗೂ ಸೊಳ್ಳೆಗಳಿಂದ ಹರಡುವ ಖಾಯಿಲೆಗಳಿಗೆ ಚಿಕಿತ್ಸೆ ನೀಡಲು ಬೇಕಾಗುವ ಔಷಧಗಳು ಲಭ್ಯವಿರಬೇಕು. ರಸ್ತೆ ಬದಿ ಎಳನೀರಿನ ಚಿಪ್ಪುಗಳನ್ನು ಕೂಡಲೆ ತೆರವು ಮಾಡಬೇಕು. ಕುಡಿಯುವ ನೀರು ಸಂಗ್ರಹಿಸುವ ಸ್ಥಳದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಬೇಕು. ನೀರು ನಿಲ್ಲುವ ಸ್ಥಳಗಳನ್ನು ಪರಿಶೀಲಿಸಿ ಸ್ವಚ್ಛ ಮಾಡಬೇಕು’ ಎಂದು ಮುಖ್ಯ ಆಯುಕ್ತರು ಸೂಚನೆ ನೀಡಿದರು.

ಸಭೆಯಲ್ಲಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ, ಕಸ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು