ಬೆಂಗಳೂರು: ರಾಜಧಾನಿಯ ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಳು ಸ್ಥಳಗಳನ್ನು ಗುರುತಿಸ ಲಾಗಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಶೀಘ್ರ ಪ್ರಸ್ತಾವ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಸಂಸ್ಥೆಗಳು ಸಿದ್ಧಪಡಿಸಿದ್ದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಎರಡನೇ ನಿಲ್ದಾಣಕ್ಕೆ ಒಂಬತ್ತು ಸ್ಥಳಗಳನ್ನು ಗುರುತಿಸ ಲಾಗಿತ್ತು. ತಾಂತ್ರಿಕ ಕಾರಣಗಳಿಂದ ಎರಡು ಸ್ಥಳ ಕೈಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ ನಂತರ ಪ್ರಾಧಿಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು ಎಂದರು.
ನಿಲ್ದಾಣಕ್ಕೆ ಸ್ಥಳ ಆಯ್ಕೆಯಲ್ಲಿ ರಾಜಕೀಯಕ್ಕೆ ಅವಕಾಶ ನೀಡದೆ ಪ್ರಾಧಿಕಾರದ 15 ಮಾನದಂಡಗಳಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.