ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಂದು ದಿನದ ಮಳೆಗೆ ಬೆಂಗಳೂರು ನಗರ ಜಲಾವೃತ: ಎಎಪಿ ಕಿಡಿ

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿ ನಿಷ್ಕ್ರಿಯತೆಯೇ ಕಾರಣ: ಎಎಪಿ ಕಿಡಿ
Published 3 ಜೂನ್ 2024, 16:18 IST
Last Updated 3 ಜೂನ್ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮೆಟ್ರೊ ಲೈನ್‌ ಮೇಲೆ ಮರ ಬಿದ್ದಿದ್ದು, ಅಂಡರ್‌ಪಾಸ್‌ಗಳು ಜಲಾವೃತಗೊಂಡು, ಸಂಚಾರ ದಟ್ಟಣೆ ಉಂಟಾಗಿದೆ. ನಗರದ ಜನ ಹೈರಾಣಾಗಿದ್ದಾರೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಮ್‌ ಆದ್ಮಿ ಪಕ್ಷದ ನಗರ ಘಟಕದ ಅಧ್ಯಕ್ಷ ಸತೀಶ್ ಕುಮಾರ್ ದೂರಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ನಗರದಲ್ಲಿ ಒಂದು ದಿನ ಸುರಿದ ಮಳೆಗೆ ಈ ಪ್ರಮಾಣದಲ್ಲಿ ತೊಂದರೆ ಆಗುತ್ತಿದ್ದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಏನಾಗಬಹುದು.  ಬಿಬಿಎಂಪಿ ಕೆಲಸ ಮಾಡದಿರುವುದೇ ಸಮಸ್ಯೆ ಉಲ್ಬಣಕ್ಕೆ ಕಾರಣ. ಮಳೆಗಾಲದ ಆರಂಭಕ್ಕೂ ಮುನ್ನವೇ ನಗರದಲ್ಲಿ ಮರಗಳ ಗಣತಿ ನಡೆಸಬೇಕಿತ್ತು. ಅಪಾಯಕಾರಿ ಒಣಕೊಂಬೆಗಳನ್ನು ತೆರವುಗೊಳಿಸಲು ಬಿಬಿಎಂಪಿಗೆ ಮನವಿ ಸಲ್ಲಿಸಿದರೂ ಮುಂಜಾಗೃತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

‘ವೈಟ್ ಟಾಪಿಂಗ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಯಲ್ಲಿ ಅಕ್ರಮ ನಡೆಯುತ್ತಿದೆ. ಇದು ನಗರಕ್ಕೆ ಮತ್ತಷ್ಟು ಸಂಕಷ್ಟ ಉಂಟುಮಾಡಿದೆ. ಮಳೆ ಸಂಬಂಧಿತ ಸಮಸ್ಯೆಗಳಿಗಾಗಿ ಸಹಾಯವಾಣಿ ಆರಂಭಿಸಿದ್ದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ. ಕಳೆದ ರಾತ್ರಿ ಎರಡೂವರೆ ಸಾವಿರಕ್ಕೂ ಹೆಚ್ಚು ಕರೆಗಳು ಬಂದರೂ, ಸ್ಪಂದಿಸುವವರು ಯಾರೂ ಇಲ್ಲ. ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದ್ದು, ಅಭಿವೃದ್ಧಿ ಹೆಸರಿನಲ್ಲಿ ಹಣ ಮಾಡುವ ಖಾತೆಯಾಗಿದೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT