ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ನೀರು: ಖಾಲಿ ಬಿಂದಿಗೆ, ಬಕೆಟ್ ಹಿಡಿದು ಎಎಪಿ ಪ್ರತಿಭಟನೆ

Published 20 ಸೆಪ್ಟೆಂಬರ್ 2023, 14:43 IST
Last Updated 20 ಸೆಪ್ಟೆಂಬರ್ 2023, 14:43 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಬುಧವಾರ ಖಾಲಿ ಬಿಂದಿಗೆ ಹಾಗೂ ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ರಾಜ್ಯದಲ್ಲಿ ಬರ ಪರಿಸ್ಥಿತಿಯಿದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ. ಏನೇ ತೊಂದರೆ ಎದುರಾದರೂ ಸರ್ಕಾರದ ಜತೆಗೆ ನಾವಿದ್ದೇವೆ’ ಎಂದು ಹೇಳಿದರು. ‘ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಸಾಹಿತಿಗಳು, ಚಿತ್ರನಟರು, ಬೆಂಗಳೂರು ನಿವಾಸಿಗಳು ಕಾವೇರಿ ನೀರಿನ ಹೋರಾಟಕ್ಕೆ ಕೈಜೋಡಿಸಬೇಕು. ಕಾವೇರಿ ಇಲ್ಲದಿದ್ದರೆ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ’ ಎಂದು ಹೇಳಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಮೋಹನ್ ದಾಸರಿ, ‘ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಡಿ.ಕೆ.ಶಿವಕುಮಾರ್ ಈಗ ಮಲಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಒಪ್ಪಂದ ಮಾಡಿಕೊಂಡಿದ್ದು, ಮತಬ್ಯಾಂಕ್‌ಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಕುಮಾರ್, ‘ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಅವರೂ ಈ ವಿಚಾರದಲ್ಲಿ ಮಾತನಾಡುತ್ತಿಲ್ಲ‘ ಎಂದು ದೂರಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ, ಮಾಧ್ಯಮ ಉಸ್ತುವಾರಿಗಳಾದ ಜಗದೀಶ್ ವಿ ಸದಂ, ಅನಿಲ್ ನಾಚಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT