ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಕ ಸಮಾಜದ ಕಟ್ಟಡ: ಸಮೀಕ್ಷೆಗೆ ಹೈಕೋರ್ಟ್‌ ನಿರ್ದೇಶನ

Last Updated 26 ಜನವರಿ 2023, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ಹಡ್ಸನ್ ವೃತ್ತದಲ್ಲಿರುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಟ್ಟಡವು (ಹಾಪ್‌ಕಾಮ್ಸ್ ಕಟ್ಟಡ) ಕಬ್ಬನ್ ಪಾರ್ಕ್‌ ವ್ಯಾಪ್ತಿಯ ಚಕ್ಕುಬಂದಿಗೆ ಒಳಪಡುತ್ತದೆಯೇ ಹೇಗೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ ಕಬ್ಬನ್‌ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್. ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠವು, ‘ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಹಾಗೂ ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು ಜಂಟಿಯಾಗಿ ಫೆಬ್ರುವರಿ 4ರಂದು ಜಂಟಿ ಸಮೀಕ್ಷೆ ನಡೆಸಬೇಕು. ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ನಿರ್ದೇಶಕರು, ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿಗಳು, ಜಲಮಂಡಳಿ ಅಧಿಕಾರಿಗಳು ಸೇರಿ ಪ್ರಕರಣದಲ್ಲಿ ಕಾಣಿಸಲಾಗಿರುವ ಎಲ್ಲ ಪ್ರತಿವಾದಿಗಳು ಹಾಜರಿರುವಂತೆ ನೋಡಿಕೊಳ್ಳಬೇಕು’ ಎಂದು ಆದೇಶಿಸಿದೆ. ‘ಸಮೀಕ್ಷೆಯ ವರದಿಯನ್ನು ಫೆಬ್ರುವರಿ 8ರಂದು ನ್ಯಾಯಪೀಠಕ್ಕೆ ಸಲ್ಲಿಸಬೇಕು‘ ಎಂದು ನಿರ್ದೇಶಿಸಿತಲ್ಲದೆ, ವಿಚಾರಣೆಯನ್ನು ಫೆಬ್ರುವರಿ 10ಕ್ಕೆ ಮುಂದೂಡಿದೆ.

ಮಧ್ಯಂತರ ಅರ್ಜಿ ಸಲ್ಲಿಕೆ: ಇದೇ ವೇಳೆ ಕೃಷಿಕ ಸಮಾಜದ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿ, ‘ರಾಜ್ಯ ಸರ್ಕಾರವು 1966ರಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜಕ್ಕೆ 53,328 ಚದರ ಅಡಿ ಜಮೀನನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಿದೆ. ಇದರನ್ವಯ ಕೃಷಿಕ ಸಮಾಜ ಆದಾಯ ತೆರಿಗೆ ಪಾವತಿಸುತ್ತಾ ಬರುತ್ತಿದೆ. ರೈತರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳುವುದಕ್ಕಾಗಿ ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿ ಇಲ್ಲಿ ಬೃಹತ್ ಕಟ್ಟಡ ನಿರ್ಮಿಸಿದೆ. ಆದರೆ, ನ್ಯಾಯಾಲಯದ ಅನುಮತಿ ಇಲ್ಲದೆ ಕಟ್ಟಡ ಬಳಕೆಗೆ ಅವಕಾಶ ಇಲ್ಲವಾಗಿದ್ದು, ಬಳಕೆಗೆ ಅನುಮತಿ ನೀಡಬೇಕು‘ ಎಂದು ಕೋರಿದರು.

‘ಕರ್ನಾಟಕ ಪ್ರದೇಶ ಕೃಷಿಕ ಸಮಾಜವು ಮೊದಲು ಮೈಸೂರು ಕೃಷಿಕ ಸಮಾಜ ಎಂದಾಗಿತ್ತು. ಇದು ಮೈಸೂರು ಸಹಕಾರ ಸಂಘಗಳ ಕಾಯ್ದೆ ಅಡಿಯಲ್ಲಿ ನೋಂದಣಿಯಾಗಿದೆ. ಈ ಸಂಸ್ಥೆ ರಾಜ್ಯದಲ್ಲಿರುವ ರೈತ ವರ್ಗಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಳನ್ನು ನೀಡುತ್ತಿದೆ. ಜತೆಗೆ, ರೈತರಿಗೆ ನೆರವಾಗವಂತಹ ಕೌಶಲ ಹೆಚ್ಚಳಕ್ಕೆ ಶ್ರಮಿಸುತ್ತಿದ್ದು, ಕೃಷಿ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿದೆ‘ ಎಂದು ಅವರು ನ್ಯಾಯಪೀಠಕ್ಕೆ ವಿವರಿಸಿದರು.

ಆಕ್ಷೇಪವೇನು?: ‘ಉದ್ಯಾನ ಹಾಗೂ ತೋಟಗಳ ಕಾಯ್ದೆಯ ವ್ಯಾಪ್ತಿಗೆ ಬರುವ ಕಬ್ಬನ್‌ ಪಾರ್ಕ್‌ನಲ್ಲಿ ಯಾವುದೇ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲ. ಹೀಗಿದ್ದರೂ, ಕಟ್ಟಡ ಗಳನ್ನು ನಿರ್ಮಿಸಲಾಗಿದೆ‘ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT