ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ₹31,500 ವೇತನ ನೀಡಲು ಆಗ್ರಹ: ಎಐಟಿಯುಸಿ ಬೃಹತ್ ಪ್ರತಿಭಟನೆ

Published 1 ಫೆಬ್ರುವರಿ 2024, 23:30 IST
Last Updated 1 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ಅಸಂಘಟಿತ ವಲಯದ ಕಾರ್ಮಿಕರಿಗೆ ಮಾಸಿಕ ಕನಿಷ್ಠ ₹31,500 ವೇತನ ನೀಡಬೇಕು’ ಎಂದು ಆಗ್ರಹಿಸಿ ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಪದಾಧಿಕಾರಿಗಳು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ಅಸಂಘಟಿತ ಕಾರ್ಮಿಕರ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ‘ರಾಜ್ಯದ 1.7 ಕೋಟಿ ಅಸಂಘಟಿತ ವಲಯದ ದುಡಿಯುವ ಜನರಿಗೆ ಕನಿಷ್ಠ ₹31,500 ಮಾಸಿಕ ವೇತನ ನಿಗದಿಗೊಳಿಸುವಂತೆ ಸುಪ್ರೀಂಕೋರ್ಟ್ ಪ್ರಕರಣವೊಂದರಲ್ಲಿ ಹೇಳಿದೆ. ಹೈಕೋರ್ಟ್ ಸಹ ಈ ಬಗ್ಗೆ ತೀರ್ಪು ನೀಡಿದೆ. ಇದನ್ನು ಸರ್ಕಾರ ಅನುಷ್ಠಾನಗೊಳಿಸಬೇಕು’ ಎಂದರು.

‘ಮಾಲೀಕರ ಒತ್ತಡಕ್ಕೆ ಮಣಿಯುತ್ತಿರುವ ಸರ್ಕಾರ, 1.7 ಕೋಟಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎ. ವಿಜಯಭಾಸ್ಕರ್, ‘ಕೇಂದ್ರ ಸರ್ಕಾರವು ಕಾರ್ಮಿಕರ ಕಾನೂನು ಸುಧಾರಣೆ ಹೆಸರಿನಲ್ಲಿ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕರನ್ನು ಆಳುವ ವರ್ಗದ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆದಿದೆ. ಕಾರ್ಮಿಕರ ಮುಷ್ಕರದ ಹಕ್ಕು, ಕಾರ್ಖಾನೆಗಳ ತಪಾಸಣೆ, ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಕಟ್ಟಡ ಕಾರ್ಮಿಕರ ಸಾಮಾಜಿಕ ಸೌಲಭ್ಯಗಳು ನಾಶವಾಗುವ ಹಂತದಲ್ಲಿವೆ’ ಎಂದರು.

ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರು, ಬಿಸಿಯೂಟ ತಯಾರಿಸುವ ಮಹಿಳೆಯರು, ಕೈಗಾರಿಕೆ, ಸಾರಿಗೆ ಹಾಗೂ ಇತರೆ ಕ್ಷೇತ್ರದ ಕಾರ್ಮಿಕರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT