ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್‌ ಯೋಧರಿಗೆ ಪ್ರಕಟಿಸಿದ್ದ ವಿಮಾ ಯೋಜನೆ ಮರು ಜಾರಿಯಾಗಲಿ’

Last Updated 18 ಏಪ್ರಿಲ್ 2021, 15:59 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಯೋಧರಿಗಾಗಿ ಕೇಂದ್ರ ಸರ್ಕಾರ ಪ್ರಕಟಿಸಿದ್ದ ₹50 ಲಕ್ಷ ಮೊತ್ತದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಪ್ಯಾಕೆಜ್‌ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ಆಗ್ರಹಿಸಿದೆ.

‘ಕೇಂದ್ರ ಸರ್ಕಾರವು 2020ರ ಮಾರ್ಚ್‌ 30ರಂದು ಈ ಯೋಜನೆಯನ್ನು ಘೋಷಿಸಿತ್ತು. ಈ ವರ್ಷದ ಮಾರ್ಚ್‌ 24ರಂದು ಪ್ರಕಟಣೆಯೊಂದನ್ನು ಹೊರಡಿಸಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿಯವರು ಈ ಯೋಜನೆಯನ್ನು ಮುಕ್ತಾಯಗೊಳಿಸಿರುವುದಾಗಿ ಅಧಿಸೂಚನೆ ಹೊರಡಿಸಿದ್ದಾರೆ. ಸರ್ಕಾರದ ಈ ನಿಲುವಿನಿಂದ ಕೊರೊನಾ ಯೋಧರಿಗೆ ದಿಕ್ಕೇ ತೋಚದಾಗಿದೆ’ ಎಂದುಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ತಿಳಿಸಿದ್ದಾರೆ.

‘ಕೋವಿಡ್‌ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರಿಂದ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದಿಗ್ಧತೆಯಲ್ಲೂ ಆರೋಗ್ಯ ಕಾರ್ಯಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಈ ಕ್ರಮ ಅಮಾನವೀಯವಾದುದು. ಜನರ ಜೀವ ಉಳಿಸಲು ತಮ್ಮ ಜೀವವನ್ನು ಮುಡಿಪಾಗಿಟ್ಟಿರುವ ಕೋವಿಡ್‌ ಯೋಧರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಯಾವ ಕಾಳಜಿಯೂ ಇಲ್ಲ ಎಂಬುದಕ್ಕೆ ಇದೊಂದು ನಿದರ್ಶನ. ಸರ್ಕಾರ ಕೂಡಲೇ ತನ್ನ ಅಧಿಸೂಚನೆ ಹಿಂದಕ್ಕೆ ಪಡೆಯಬೇಕು. ಜೊತೆಗೆ ಆಶಾ ಕಾರ್ಯಕರ್ತೆಯರ ವಿಶೇಷ ಸೇವೆಯನ್ನು ಪರಿಗಣಿಸಿ ಅವರಿಗೆ ವಿಶೇಷ ಪ್ರೋತ್ಸಾಹ ಧನ ಪ್ರಕಟಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಅಂದಾಜು 22 ಲಕ್ಷ ಮಂದಿ ಆರೋಗ್ಯ ಕಾರ್ಯಕರ್ತರು ವಿಮಾ ಸೌಲಭ್ಯದಿಂದ ವಂಚಿತವಾಗಲಿದ್ದಾರೆ. ಇವರ ಕುಟುಂಬ ಬೀದಿಗೆ ಬೀಳುವ ಆತಂಕದಲ್ಲಿದೆ. ಇದನ್ನು ಸರ್ಕಾರ ಅರಿತುಕೊಳ್ಳಬೇಕು. ಮೊದಲ ಅಲೆಯಲ್ಲಿ 10ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ ಒಬ್ಬರಿಗೆ ಮಾತ್ರ ₹50 ಲಕ್ಷ ಬಂದಿದೆ. ಆದರೆ ಉಳಿದ ಕುಟುಂಬಗಳಿಗೆ ವಿಮಾ ಮೊತ್ತ ಇನ್ನೂ ಕೈ ಸೇರಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಚರ್ಚಿಸಲಾಗಿದೆ. ಮನವಿ ನೀಡಲಾಗಿದೆ. ಇದರಿಂದ ಯಾವ ಪ್ರಯೋಜನವೂ ಆಗಿಲ್ಲ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT