ಮಂಗಳವಾರ, ಅಕ್ಟೋಬರ್ 19, 2021
22 °C

ಜಯನಗರ ವಾಣಿಜ್ಯ ಸಂಕೀರ್ಣದ ಮಳಿಗೆಗಳ ಹಂಚಿಕೆ: ಲೋಕಾಯುಕ್ತ ತನಿಖೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ನಡೆಸದೆ ಹಂಚಿಕೆ ಮಾಡಲಾಗಿದೆ' ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಶ್ರೀನಗರದ ರಾಘವೇಂದ್ರ ಬ್ಲಾಕ್ ನಿವಾಸಿ ಎಂ. ಶರಣು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

’2017ರ ಡಿಸೆಂಬರ್ 6ರ ನ್ಯಾಯಾಲಯದ ಆದೇಶದ ಅನುಸಾರ ದೂರಿನ ಆರೋಪಗಳ ಬಗ್ಗೆ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ‘ ಎಂದು ನ್ಯಾಯಪೀಠ ಲೋಕಾಯುಕ್ತಕ್ಕೆ ನಿರ್ದೇಶಿಸಿದೆ. 

'ಲೋಕಾಯುಕ್ತ ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ತನಿಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಲೋಕಾ
ಯುಕ್ತಕ್ಕೆ ಒದಗಿಸಬೇಕು‘ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ತಾಕೀತು ಮಾಡಿರುವ ನ್ಯಾಯಪೀಠ,  ವಿಚಾರಣೆಯನ್ನು 2022ರ ಜನವರಿಗೆ ಮುಂದೂಡಿದೆ.

ವಿಚಾರಣೆ ವೇಳೆ  ಬಿಬಿಎಂಪಿಯ ನಿರ್ಲಕ್ಷ್ಯ ಧೋರಣೆಯನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ‘ಮುಂದಿನ ವಿಚಾರಣೆ ವೇಳೆ ಆಯುಕ್ತರ ವಿರುದ್ಧ ದೋಷಾರೋಪ ನಿಗದಿಪಡಿಸಲಾಗುವುದು‘ ಎಂದು ಎಚ್ಚರಿಸಿತು. 

ಇದಕ್ಕೆ ಸಮಜಾಯಿಷಿ ನೀಡಿದ ಬಿಬಿಎಂಪಿ ಪರ ವಕೀಲ ಕೆ.ಎನ್. ಪುಟ್ಟೇಗೌಡ, ‘ಹಾಲಿ ಆಯುಕ್ತರು 2021ರ ಏಪ್ರಿಲ್‌ 1ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಮಳಿಗೆಗಳ ಹಂಚಿಕೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಈ ಕುರಿತ ಲಿಖಿತ ಹೇಳಿಕೆಗಳನ್ನು ಮಾನ್ಯ ಮಾಡಬೇಕು‘ ಎಂದು ಮನವಿ ಮಾಡಿದರು.

ಹೇಳಿಕೆ ಪರಿಶೀಲಿಸಿದ ನ್ಯಾಯಪೀಠ, ’ಮಳಿಗೆಗಳನ್ನು ಟೆಂಡರ್ ಇಲ್ಲದೇ ಹಂಚಿಕೆ ಮಾಡಲಾಗಿದೆ. ಆದ್ದರಿಂದ, ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವುದು ಸೂಕ್ತ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ ಸಮೀಕ್ಷೆಗೆ ಎರಡು ತಿಂಗಳ ಗಡುವು

ಬೆಂಗಳೂರು: ‘ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ (ಮ್ಯಾನುಯೆಲ್ ಸ್ಕ್ಯಾವೆಂಜರ್ಸ್) ಸಮಗ್ರ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಕಾರ್ಮಿಕರಿಂದ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಕಾರ್ಮಿಕ ಒಕ್ಕೂಟ ಮಂಡಳಿಯ ಅಖಿಲ ಭಾರತ ಕೇಂದ್ರ ಸಮಿತಿಯ (ಎಸಿಸಿಟಿಯು) ಕರ್ನಾಟಕ ಘಟಕ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ತಮಟೆ’ ಸ್ವಯಂಸೇವಾ ಸಂಸ್ಥೆ ಪರ ಹಾಜರಾಗಿದ್ದ ‌ಹಿರಿಯ ವಕೀಲೆ ಜಯ್ನಾ ಕೊಠಾರಿ, ‘ಸಮೀಕ್ಷೆ ನಡೆಸಲು ನ್ಯಾಯಾಲಯ ಈ ಹಿಂದೆಯೇ ನಿರ್ದೇಶನ ನೀಡಿದ್ದರೂ ಈತನಕ ಆಗಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಯಾಗಿ ಸರ್ಕಾರದ ಪರ ವಕೀಲರು ‘ಸಮೀಕ್ಷೆ ನಡೆಸಲು ನೋಡಲ್ ಅಧಿಕಾರಿ ನೇಮಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು