ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿವಾದ: ಸಂಘಟನೆ ಅಧ್ಯಕ್ಷರಿಗೆ ನೋಟಿಸ್‌

Last Updated 20 ಡಿಸೆಂಬರ್ 2021, 16:54 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು 4 ತಿಂಗಳ ಒಳಗೆ ಸ್ಥಳಾಂತರಿಸುವುದಾಗಿ ನ್ಯಾಯಾಲಯಕ್ಕೆ ಮುಚ್ಚಳಿಕೆ ನೀಡಿದ್ದರೂ ಪ್ರತಿಮೆ ಸ್ಥಳಾಂತರಿಸಿಲ್ಲ’ ಎಂಬ ಕಾರಣಕ್ಕೆ ಹರಪನಹಳ್ಳಿಯ ‘ಡಾ. ಬಿ.ಆರ್. ಅಂಬೇಡ್ಕರ್ ಯುವ ಸಂಘಟನೆ’ ಅಧ್ಯಕ್ಷ ರೇವಣ ಸಿದ್ದಪ್ಪ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಲು ಆದೇಶಿಸಿದೆ.

ಈ ಕುರಿತಂತೆ ನೀಲಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಹೈಕೋರ್ಟ್‌ಗೆ ನೀಡಲಾಗಿದ್ದ ಭರವಸೆಯಂತೆ ಪ್ರತಿಮೆಯನ್ನು ಈವರೆಗೂ ಸ್ಥಳಾಂತರಿಸಿಲ್ಲ. ಪ್ರತಿಮೆ ತೆರವು ವಿಚಾರದಲ್ಲಿ ಪ್ರತಿವಾದಿ ಸಂಘಟನೆ ಸಾಕಷ್ಟು ತೊಂದರೆ ಉಂಟು ಮಾಡುತ್ತಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ‘ಪ್ರತಿಮೆ ತೆರವುಗೊಳಿಸುವುದಾಗಿ ಪ್ರಮಾಣಪತ್ರ ಸಲ್ಲಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಯುವ ಸಂಘಟನೆಯ ಅಧ್ಯಕ್ಷ ರೇವಣ ಸಿದ್ದಪ್ಪ ಮುಂದಿನ ವಿಚಾರಣೆಗೆ ಕೋರ್ಟ್‌ ಮುಂದೆ ಹಾಜರಾಗಬೇಕು. ಕೋರ್ಟ್ ಆದೇಶ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿ ವಿಚಾರಣೆ ಮುಂದೂಡಿದೆ.

ಆಗಸ್ಟ್‌ 13ರಂದು ನಡೆದ ವಿಚಾರಣೆ ವೇಳೆ ರೇವಣ ಸಿದ್ದಪ್ಪ ನ್ಯಾಯಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದರು. ಅಂಬೇಡ್ಕರ್ ಪ್ರತಿಮೆಯನ್ನು 4 ತಿಂಗಳೊಳಗೆ ಪರ್ಯಾಯ ಜಾಗಕ್ಕೆ ಸ್ಥಳಾಂತರಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಇದನ್ನು ಪರಿಗಣಿಸಿದ್ದ ನ್ಯಾಯಪೀಠ, ‘ಪ್ರತಿಮೆ ತೆರವುಗೊಳಿಸಿ ಡಿ.17ರೊಳಗೆ ಅನುಪಾಲನಾ ವರದಿ ಸಲ್ಲಿಸಿ’ ಎಂದು ಸೂಚಿಸಿ ಅರ್ಜಿ ವಿಲೇವಾರಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT