ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಗೆ ‘ಅಮೃತ ಮಹೋತ್ಸವ ನಗರೋತ್ಥಾನ': ಬಸವರಾಜ ಬೊಮ್ಮಾಯಿ

75 ಕೆರೆಗಳ ಸಮಗ್ರ ಅಭಿವೃದ್ಧಿ: ಮುಖ್ಯಮಂತ್ರಿ ವಾಗ್ದಾನ
Last Updated 9 ಆಗಸ್ಟ್ 2022, 7:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿಯ ಮೂಲಸೌಕರ್ಯ ಅಭಿವೃದ್ಧಿಗಾಗಿ ‘ಅಮೃತ ಮಹೋತ್ಸವ ನಗರೋತ್ಥಾನ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿಯವರ ನಗರೋತ್ಥಾನ ಯೋಜನೆಯ ಅಡಿಯಲ್ಲಿ ₹ 8,343.87 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಡಿ ನಗರದ ರಸ್ತೆ, ಮಳೆ ನೀರು ಚರಂಡಿ ಮತ್ತಿತರ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ‘ಅಮೃತ ಮಹೋತ್ಸವ ನಗರೋತ್ಥಾನ’ ಯೋಜನೆಯಡಿ ಮೂರನೇ ಹಂತದ ಕಾಮಗಾರಿ ಕೈಗೊಳ್ಳಲಾಗುವುದು’ ಎಂದು ಪ್ರಕಟಿಸಿದರು.

‘ನಗರದಲ್ಲಿ ಉತ್ಪತ್ತಿಯಾಗುವ ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ಬಿಡದಿಯಲ್ಲಿ ನಿರ್ಮಾಣವಾಗುತ್ತಿದೆ. ಇದರಿಂದ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ದೊರಕುವ ವಿಶ್ವಾಸವಿದೆ. ನಮ್ಮ ಮೆಟ್ರೊ ಯೋಜನೆ ಹಾಗೂ ಉಪನಗರ ರೈಲು ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

ಮತ್ತೆರಡು ಯೋಜನೆ:

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ಬೆಂಗಳೂರು ನಗರದ 75 ಕೊಳೆಗೇರಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಬೊಮ್ಮಾಯಿ ಪ್ರಕಟಿಸಿದರು.

ನಗರದ ವ್ಯಾಪ್ತಿಯಲ್ಲಿ ಹಲವು ಕೆರೆಗಳಿವೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 75 ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಭಾಷಣಕ್ಕೆ ಸೀಮಿತವಾದ ಕಾರ್ಯಕ್ರಮ

ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮತ್ತುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾಷಣಕ್ಕಷ್ಟೆ ಸೀಮಿತವಾಗಿತ್ತು. ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಇಲ್ಲದ ಕಾರಣ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗುಂದಿತ್ತು.

ಹಿಂದೆ ಬಹುತೇಕ ವರ್ಷಗಳಲ್ಲಿ ಇಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಲ್ಲಿ ಪೊಲೀಸ್‌‌, ಸಶಸ್ತ್ರ ಪಡೆಗಳು, ಎನ್‌ಸಿಸಿ ಸೇರಿದಂತೆ ವಿವಿಧ ಘಟಕಗಳ ಪಥಸಂಚಲನ ಸಮಾರಂಭದ ಮೆರುಗನ್ನು ಹೆಚ್ಚಿಸುತ್ತಿತ್ತು. ಆಕರ್ಷಕವಾದ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರುತ್ತಿದ್ದವು. ಅವುಗಳನ್ನು ನೋಡಲೆಂದೇ ವಿವಿಧ ಕಡೆಗಳಿಂದ ಜನರು ಬರುತ್ತಿದ್ದರು. ಆದರೆ, ಕೋವಿಡ್‌ ಕಾರಣದಿಂದ ಈ ಬಾರಿ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ಕೈಬಿಡಲಾಗಿತ್ತು.

ಧ್ವಜಾರೋಹಣ ನೆರವೇರಿಸಿದ ಬಳಿಕ ತೆರೆದ ಜೀಪಿನಲ್ಲಿ ಸಾಗಿದ ಮುಖ್ಯಮಂತ್ರಿಯವರು ಗೌರವ ವಂದನೆ ಸ್ವೀಕರಿಸಿ, ಮರಳಿದರು. ಮುಖ್ಯಮಂತ್ರಿಯವರ ಭಾಷಣದ ಬಳಿಕ ಪಥ ಸಂಚಲನ ಇಲ್ಲದೆಯೇ ಕವಾಯತು ವಿಸರ್ಜಿಸಲಾಯಿತು.

ಈ ಬಾರಿ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶವನ್ನೂ ನಿರ್ಬಂಧಿಸಲಾಗಿತ್ತು. ಆದ್ದರಿಂದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಕಡಿಮೆ ಸಂಖ್ಯೆಯ ಜನರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT