ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಬೃಹತ್ ಪ್ರತಿಭಟನೆ

ಪೂರ್ವ ಪ್ರಾಥಮಿಕ ತರಗತಿ ಆರಂಭದ ಆದೇಶ ರದ್ದತಿಗೆ ಆಗ್ರಹ
Published 19 ಜೂನ್ 2024, 15:58 IST
Last Updated 19 ಜೂನ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು. ಅಂಗನವಾಡಿ ಕೇಂದ್ರದ ಹೆಸರು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರವೆಂದು ಪರಿವರ್ತಿಸಬೇಕು. ಸರ್ಕಾರ ಇಲ್ಲಿನ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಶೂಗಳನ್ನು ವಿತರಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಅಂಗನವಾಡಿ ಕಾರ್ಯಕರ್ತರಿಗೆ ‘ಶಿಕ್ಷಕಿ’ಯರ ಸ್ಥಾನ ನೀಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿರುವ (ಐಸಿಡಿಎಸ್‌) ಆರಂಭಿಕ ಆರೈಕೆ ಮತ್ತು ಶಿಕ್ಷಣಕ್ಕೆ (ಇಸಿಸಿಇ) ಅನುದಾನ ಹೆಚ್ಚಿಸಬೇಕು. ಶಿಕ್ಷಣ ಇಲಾಖೆಯಲ್ಲಿ ಅತಿಥಿ ಶಿಕ್ಷಕರಿಗೆ ನೀಡುವ ಗೌರವ ಧನವನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಬೇಕು. ಇಸಿಸಿಇ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡುವಂತೆ ಕಾನೂನು ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಗೊಳಿಸಬೇಕು. ಐಸಿಡಿಎಸ್‌ ಯೋಜನೆಯನ್ನು ಪ್ರತ್ಯೇಕ ನಿರ್ದೇಶನಾಲಯವನ್ನಾಗಿ ಪರಿವರ್ತಿಸಬೇಕು. ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಯಿಟಿ ಹಣ ಪಾವತಿಸಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು’ ಎಂಬ ಬೇಡಿಕೆಗಳನ್ನು ಮಂಡಿಸಿದರು.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಾರಂಭಿಸಿರುವ ಕೂಸಿನ ಮನೆಯ ಫಲಾನುಭವಿಗಳು ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ಒಂದೇ ಆಗಿದ್ದಾರೆ. ಆದ್ದರಿಂದ, ಅವೈಜ್ಞಾನಿಕ ಕೂಸಿನ ಮನೆಯ ಯೋಜನೆಯನ್ನು ರದ್ದುಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ಗರ್ಭಿಣಿ–ಬಾಣಂತಿಯರ ಆರೈಕೆ ಹೊರತುಪಡಿಸಿ ಉಳಿದ ಕೆಲಸ ನಿರ್ಬಂಧಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷೆ ಎಸ್‌. ವರಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದ ಸೇರಿದಂತೆ ವಿವಿಧ ಜಿಲ್ಲೆಗಳ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಂಗನವಾಡಿಗಳಿಗೆ ಧಕ್ಕೆ: ನಿರ್ಧಾರ ವಾಪಸ್‌ಗೆ ಆಗ್ರಹ

ಸರ್ಕಾರದ ಕೆಲ ನಿರ್ಧಾರಗಳಿಂದ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ತಕ್ಷಣ ಅಂತಹ ನಿರ್ಧಾರಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ಅಧ್ಯಕ್ಷ ಬಿ. ಅಮ್ಜದ್‌ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ಸರ್ಕಾರದ ವಿವಿಧ ಇಲಾಖೆಗಳು ಕೂಸಿನ ಮನೆ ಶಿಶುಪಾಲನ ಕೇಂದ್ರಗಳು ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳಲ್ಲಿನ ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸವಲತ್ತುಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಶಿಕ್ಷಣ ನೀತಿ ರೂಪಿತವಾಗುವ ಮೊದಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವುದು ಸರಿಯಲ್ಲ. ಇದರಿಂದ ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಅಂಗನವಾಡಿಗಳು ದುರ್ಬಲಗೊಳ್ಳಲಿವೆ. ಹಾಗಾಗಿ ನಿರ್ಧಾರಗಳನ್ನು ಮರು ಮರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಉಪಸ್ಥಿತರಿದ್ದರು. 

‘ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ’

‘ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಕುರಿತು ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರ ಮನವಿ ಸ್ವೀಕರಿಸಿ ‘ಅಂಗನವಾಡಿ ನೌಕರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂಬ ಭರವಸೆ ನೀಡಿದರು. 

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು. –ಪ್ರಜಾವಾಣಿ ಚಿತ್ರ/ಪ್ರಶಾಂತ್ ಎಚ್.ಜಿ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು. –ಪ್ರಜಾವಾಣಿ ಚಿತ್ರ/ಪ್ರಶಾಂತ್ ಎಚ್.ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT