ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆಗಳ ಶಿಕ್ಷಕರಿಗೆ ಪ್ಯಾಕೇಜ್ ಘೋಷಿಸಲು ಮುಖ್ಯಮಂತ್ರಿಗೆ ಮನವಿ

ಶಿಕ್ಷಕ– ಪದವೀಧರ ಕ್ಷೇತ್ರದ ಬಿಜೆಪಿ ಸದಸ್ಯರ ನಿಯೋಗದಿಂದ ಮುಖ್ಯಮಂತ್ರಿಗೆ ಮನವಿ
Last Updated 26 ಮೇ 2021, 6:46 IST
ಅಕ್ಷರ ಗಾತ್ರ

ಬೆಂಗಳೂರು: ‘ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು’ ಎಂದು ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ವಿಧಾನಪರಿಷತ್‌ ಬಿಜೆಪಿ ಸದಸ್ಯರ ನಿಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್‌ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬೆಳಿಗ್ಗೆ ಭೇಟಿ ಮಾಡಿದ ಸದಸ್ಯರು, ‘ಈ ಸಮುದಾಯದ ಸ್ಥಿತಿ ಶೋಚನೀಯವಾಗಿದೆ. ದೈನಂದಿನ ಜೀವನ ನಿರ್ವಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಈ ಸಮುದಾಯದ ಹಲವರು ಹಣ್ಣು ತರಕಾರಿ ಮಾರುತ್ತಿದ್ದಾರೆ. ಕೆಲವರು ಕೂಲಿ ಕೆಲಸ‌ ಮಾಡುತ್ತಿದ್ದಾರೆ. ಮಕ್ಕಳ ಹಿತ ಕಾಯುವ ಈ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯ. ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಲು ಸಹಕಾರಿಯಾಗಲಿದೆ’ ಎಂದರು.

‘ಅನುದಾನರಹಿತ ಶಾಲಾ ಕಾಲೇಜುಗಳ ಸಿಬ್ಬಂದಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಹಾಗೂ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ಮರಣ ಹೊಂದಿದ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿಯ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಹುದ್ದೆಯನ್ನು ತ್ವರಿತವಾಗಿ ನೀಡಬೇಕು ಸೇರಿದಂತೆ ವಿವಿಧ ವಿಷಯಗಳ ಕುರಿತು ಸದಸ್ಯರು ಮುಖ್ಯಮಂತ್ರಿ ಜೊತೆ ಚರ್ಚಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ವೈ.ಎ. ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್ ನಮೋಷಿ, ಎಸ್‌.ವಿ. ಸಂಕನೂರ, ಹನುಮಂತ ನಿರಾಣಿ ಮತ್ತು ಚಿದಾನಂದ ಗೌಡ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT