ಭಾನುವಾರ, ಸೆಪ್ಟೆಂಬರ್ 26, 2021
22 °C
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಇಂದು

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತರು, ಕಾರ್ಮಿಕರ ಬೆನ್ನಲ್ಲೇ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ಕೂಡ ಹೋರಾಟದ ಹಾದಿ ಹಿಡಿದಿದ್ದು, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಬುಧವಾರ ರಾಜ್ಯಮಟ್ಟದ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಕೊರೊನಾ ಸೋಂಕಿತರ ಪತ್ತೆ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳಡಿ 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಅವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಿಕ ₹ 6 ಸಾವಿರ ವೇತನ ನೀಡಲಾಗುತ್ತಿದೆ. ಇದನ್ನು ₹ 12 ಸಾವಿರಕ್ಕೆ ಏರಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆ. ಅಪಾಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಮಗೆ ಮುಖಗವಸು ಸೇರಿದಂತೆ ವೈಯಕ್ತಿಕ ಸುರಕ್ಷಾ ಸಾಧನಗಳನ್ನು ಒದಗಿಸಬೇಕೆಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದು, ಬುಧವಾರ ಮಧ್ಯಾಹ್ನ 12 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

‘ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈನಲ್ಲಿ  20 ದಿನಗಳು ಮುಷ್ಕರ ನಡೆಸಿದ್ದೆವು.  ಬೇಡಿಕೆಗಳನ್ನು ಈಡೇರಿಸುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದರು. ಒಂದೂವರೆ ತಿಂಗಳಾದರೂ ಬೇಡಿಕೆಗಳನ್ನು ಈಡೇರಿಸಲಿಲ್ಲ. ನಮ್ಮ ಸಮಸ್ಯೆಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ಕೂಡ ಬಂದಿವೆ. ಹಾಗಿದ್ದರೂ ಪ್ರಯೋಜನವಾಗಿಲ್ಲ. ಈಗ ಮತ್ತೊಮ್ಮೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗಿದೆ’ ಎಂದು ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.

‘ಸರ್ಕಾರವೇ ನಮ್ಮನ್ನು ಹೋರಾಟಕ್ಕೆ ತಳ್ಳುತ್ತಿದೆ. ಕಳೆದ ಏಳು ತಿಂಗಳಲ್ಲಿ ಹಲವು ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗಳು ನಡೆದಿವೆ. ಕೆಲವರು ಸೋಂಕಿತರಾಗಿ ಆಸ್ಪತ್ರೆ ಸೇರಿದ್ದಾರೆ. ವೇತನ ಹೆಚ್ಚಳದ ಜತೆಗೆ ಕಾಲಕಾಲಕ್ಕೆ ಎಲ್ಲ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಕೋವಿಡ್‌ ದೃಢಪಟ್ಟಲ್ಲಿ ಉಚಿತವಾಗಿ ಚಿಕಿತ್ಸೆ ಒದಗಿಸಿ, ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿಯೂ ಗೌರವಧನ ನೀಡಬೇಕು. ಈಗಾಗಲೇ ಘೋಷಿಸಿರುವ ₹ 3 ಸಾವಿರ ಕೋವಿಡ್‌ ಪ್ರೋತ್ಸಾಹ ಧನವನ್ನು ಪಾವತಿಸಲು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು