ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದ ಬ್ಯಾಕ್‌ಲಾಗ್‌ ಹುದ್ದೆ ಭರ್ತಿ: ಶೀಘ್ರ ಸಂದರ್ಶನ?

ಬೆಂಗಳೂರು ವಿಶ್ವವಿದ್ಯಾಲಯ
Last Updated 10 ಜೂನ್ 2021, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಶೀಘ್ರವೇ ಸಂದರ್ಶನ ನಡೆಯಲಿದೆ. ಯಾವುದೇ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಇಲ್ಲದಿದ್ದರೆ ಮಾತ್ರ ಮರುಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ.

’ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸದ್ಯ 20 ಬ್ಯಾಕ್‌ಲಾಗ್‌ ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆಯಲಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಅಭ್ಯರ್ಥಿಗಳಿದ್ದಲ್ಲಿ ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಿ. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಇರದಿದ್ದರೆ, ಆ ಹುದ್ದೆಗಳಿಗೆ ಮರು ಅಧಿಸೂಚನೆ ಹೊರಡಿಸಿ ಎಂದು ಇಲಾಖೆ ಸಲಹೆ ನೀಡಿದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಕೆ. ಜ್ಯೋತಿ ‘ಪ್ರಜಾವಾಣಿ‘ಗೆ ತಿಳಿಸಿದರು.

‘ಬ್ಯಾಕ್‌ಲಾಗ್‌ ಹುದ್ದೆಗಳ ವಿಶೇಷ ನೇಮಕಾತಿ ನಿಯಮಗಳ ಬಗ್ಗೆ ಕೆಲವು ಗೊಂದಲಗಳೂ ಇದ್ದವು. ಇಂಗ್ಲಿಷ್‌ ಪ್ರಾಧ್ಯಾಪಕ ಹುದ್ದೆಯ ನೇಮಕಾತಿಯ ವಿಷಯ ಕುರಿತು ಅಭ್ಯರ್ಥಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಹುದ್ದೆ ಬಿಟ್ಟು ಉಳಿದ ಹುದ್ದೆಗಳ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಯುಜಿಸಿ ನಿಯಮಗಳನ್ನು, ವಯೋಮಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿಯಮಗಳನ್ನು ಅನುಸರಿಸುವಂತೆ ನ್ಯಾಯಾಲಯ ಹೇಳಿದೆ’ ಎಂದೂ ಅವರು ತಿಳಿಸಿದರು.

ಮೊದಲಿನಿಂದಲೂ ಗೊಂದಲ:

ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 55 ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ 2018ರ ಫೆ. 26ರಂದು ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು. ಅದೇ ವರ್ಷ ಮಾರ್ಚ್‌ 21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 35 ಹುದ್ದೆಗಳಿಗೆ 2019ರ ಜುಲೈ 25, ಡಿ. 27 ಮತ್ತು 2020ರ ಆಗಸ್ಟ್‌ 3ರಂದು ನೇಮಕಾತಿ ನಡೆಸಲಾಗಿತ್ತು. ಉಳಿದ 20 ಹುದ್ದೆಗಳಲ್ಲಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆಗಿರಲಿಲ್ಲ. ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆಗಿದ್ದರೂ ಕನಿಷ್ಠ ಅರ್ಹತೆ ಇರಲಿಲ್ಲ ಎಂದು ತಿಳಿಸಲಾಗಿತ್ತು. ‌ವಿಶ್ವವಿದ್ಯಾಲಯದಲ್ಲಿ ಬೋಧಕ ವೃಂದದಲ್ಲಿ ಮೀಸಲಾತಿ ರೋಸ್ಟರ್‌ ಜಾರಿಯಲ್ಲಿ ಲೋಪ ಆಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಕೆಲವು ಅಭ್ಯರ್ಥಿಗಳು ದೂರು ನೀಡಿದ್ದರು. ಈ ಬಗ್ಗೆ ಪರಿಶೀಲಿಸಲು ಇಲಾಖೆ ತಂಡ ರಚಿಸಿತ್ತು.

‘20 ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸಿ, ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಆಹ್ವಾನಿಸಬೇಕು. ಅಲ್ಲದೆ, ಮೂರು ತಿಂಗಳ ಒಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಕುಲಪತಿ ಪ್ರೊ. ಕೆ.ಆರ್‌. ವೇಣುಗೋಪಾಲ್‌ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT