ಬೆಂಗಳೂರು: ‘ಜೆ.ಪಿ. ನಗರದ ಒಂದನೇ ಹಂತದ ಒಂಬತ್ತನೇ ಅಡ್ಡರಸ್ತೆಯ ಟುಲಿಪ್ ಅಪಾರ್ಟ್‌ಮೆಂಟ್ ಮುಂಭಾಗದ ಪಾದಚಾರಿ ಮಾರ್ಗವನ್ನು ಬೀದಿ ವ್ಯಾಪಾರಿಗಳು ಅತಿಕ್ರಮಿಸಿಕೊಂಡಿದ್ದಾರೆ. ಇದರಿಂದ, ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಆಗಿದೆ’ ಎಂದು ಸ್ಥಳೀಯ ನಿವಾಸಿ ಪಿ. ಮುತ್ತುರಾಜು ದೂರಿದ್ದಾರೆ.
‘ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ನಡೆಸುತ್ತಿದ್ದು, ಇದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಆಗುತ್ತಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ‘ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ವ್ಯಾಪಾರಿಗಳು ತ್ಯಾಜ್ಯವನ್ನು ಪಾದಚಾರಿ ಮಾರ್ಗದಲ್ಲಿ ಹಾಕುತ್ತಿದ್ದಾರೆ. ಇದರಿಂದ ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ. ಸುತ್ತಮುತ್ತಲಿನ ನಿವಾಸಿಗಳಲ್ಲಿ ಡೆಂಗಿ ಹರಡುವ ಭೀತಿ ಶುರುವಾಗಿದೆ’ ಎಂದು ಆರೋಪಿಸಿದ್ದಾರೆ.
‘ಬಿಬಿಎಂಪಿ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಅತಿಕ್ರಮಗೊಂಡ ಪಾದಚಾರಿ ಮಾರ್ಗವನ್ನು ತೆರವು ಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ
ಅ.2ರಂದು ಮಾಂಸ ಮಾರಾಟ ನಿಷೇಧ
ಗಾಂಧಿ ಜಯಂತಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಅಕ್ಟೋಬರ್ 2ರ ಬುಧವಾರದಂದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.