ಬುಧವಾರ, ಏಪ್ರಿಲ್ 1, 2020
19 °C
ಕೌನ್ಸಿಲ್‌ ಸಭೆಯಲ್ಲಿ ತೀರ್ಮಾನ ಸಾಧ್ಯತೆ

529 ಸರ್ಕಾರಿ ಶಾಲೆಗಳು ಬಿಬಿಎಂಪಿಗೆ ಹಸ್ತಾಂತರಿಸಲು ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ 529 ಸರ್ಕಾರಿ ಶಾಲೆಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಲು ಪ್ರಸ್ತಾವನೆ ಸಿದ್ಧವಾಗಿದೆ.

ಪಾಲಿಕೆ ಕಚೇರಿಯಲ್ಲಿ ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ಹಾಗೂ ನಗರ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ನರಸಿಂಹಮೂರ್ತಿ ಈ ವಿಷಯ ತಿಳಿಸಿದರು.
ಎಲ್ಲಾ ಶಾಲೆಗಳಿಗೂ ನಾಡಪ್ರಭು ಕೆಂಪೇಗೌಡರ ಹೆಸರು ನಾಮಕರಣ ಮಾಡಲು ಯೋಜಿಸಲಾಗಿದೆ ಎಂದರು.

‘529 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 80 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ಇದೆ. ಈ ಎಲ್ಲ ಸರ್ಕಾರಿ ಶಾಲೆಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತಂದು ಉತ್ತಮ ಸೌಕರ್ಯ ನೀಡಲು ಪ್ರಯತ್ನಿಸಲಾಗುವುದು. ಜಿಲ್ಲಾ ಪಂಚಾಯಿತಿಯಲ್ಲಿ ಅನುದಾನದ ಕೊರತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ನರಸಿಂಹಮೂರ್ತಿ ತಿಳಿಸಿದರು.

‘ಈ ಸರ್ಕಾರಿ ಶಾಲೆಗಳಲ್ಲಿ ನೀರು ಹಾಗೂ ವಿದ್ಯುತ್ ಬಿಲ್‌ ವೆಚ್ಚ ತಿಂಗಳಿಗೆ ₹20 ಸಾವಿರ ಬರುತ್ತಿದೆ. ಶಿಥಿಲಗೊಂಡ ಕಟ್ಟಡಗಳ ದುರಸ್ತಿಗೂ ಅನುದಾನ ಸಾಲುತ್ತಿಲ್ಲ’ ಎಂದು ತಿಳಿಸಿದರು. ಮಂಜುಳಾ ನಾರಾಯಣಸ್ವಾಮಿ, ‘529 ಸರ್ಕಾರಿ ಶಾಲೆಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸುವ ಸಂಬಂಧ ಕೌನ್ಸಿಲ್‌ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಬಳಿಕ ಈ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲಾಗುವುದು’ ಎಂದರು.

‘ರಾಜರಾಜೇಶ್ವರಿನಗರ, ದಾಸರಹಳ್ಳಿ, ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಯಲಹಂಕ ವಲಯದಲ್ಲಿ ಬಿಬಿಎಂಪಿಯ ಎರಡು ಶಾಲೆಗಳಷ್ಟೇ ಇವೆ. ಪ್ರತಿ ವಲಯದಲ್ಲಿ ತಲಾ 5 ಶಾಲೆಗಳನ್ನು ಆರಂಭಿಸಲು ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವ ವಿಶ್ವಾಸ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು