ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣಿನ ಫಲವತ್ತತೆ: ನೈಸರ್ಗಿಕ ಕೃಷಿ ಅಳವಡಿಕೆಗೆ ಎಸ್.ವಿ. ಸುರೇಶ ಸಲಹೆ

ತರಬೇತಿ ಕಾರ್ಯಕ್ರಮದಲ್ಲಿ ಕೃಷಿ ವಿವಿ ಕುಲಪತಿ ಎಸ್.ವಿ.ಸುರೇಶ್
Published 25 ಮಾರ್ಚ್ 2024, 15:53 IST
Last Updated 25 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ‘ಕೀಟನಾಶಕ ಹಾಗೂ ರಸಗೊಬ್ಬರದ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಂಠಿತಗೊಂಡಿದೆ’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸಿಬ್ಬಂದಿ ತರಬೇತಿ ಘಟಕ ಹಾಗೂ ಹೈದರಾಬಾದ್‌ನ ರಾಷ್ಟ್ರೀಯ ಕೃಷಿ ನಿರ್ವಹಣಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿರುವ ‘ನೈಸರ್ಗಿಕ ಕೃಷಿ’ ಕುರಿತು ಐದು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣ ಶೇ 0.5ರಷ್ಟು ಇರಬೇಕು. ಆದರೆ, ಈಗ ಶೇ 0.35ರಷ್ಟಿದೆ. ಇಂತಹ ಮಣ್ಣಿನಲ್ಲಿ ಬೆಳೆದ ಕೃಷಿ ಉತ್ಪನ್ನಗಳಲ್ಲಿ ಮನುಷ್ಯನಿಗೆ ಅಗತ್ಯವಾದ ಪೋಷಕಾಂಶಗಳು ಕಡಿಮೆ ಇರುತ್ತವೆ’ ಎಂದು ತಿಳಿಸಿದರು.

‘ಶಿಫಾರಸು ಪ್ರಮಾಣದ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಹಾಗೂ ಸಾಂಪ್ರದಾಯಿಕ ಕೃಷಿಗೆ ಒತ್ತು ನೀಡಿದಾಗ ಮಾತ್ರ ವಿಷಮುಕ್ತ ಆಹಾರ ಉತ್ಪಾದಿಸಲು ಸಾಧ್ಯ. ಈ ನಿಟ್ಟಿನಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿಯನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸತ್ವಯುತ ಆಹಾರ ಉತ್ಪಾದಿಸಬಹುದು’ ಎಂದರು.

‘ನೈಸರ್ಗಿಕ ಕೃಷಿಯಿಂದ ರೈತರು ಆರ್ಥಿಕವಾಗಿ ಅಭಿವೃದ್ಧಿಯಾಗುವಂತಹ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಬೇಕು. ಮುಂದಿನ ದಿನಗಳಲ್ಲಿ ನೈಸರ್ಗಿಕ ಕೃಷಿಯ ಉತ್ಪನ್ನಗಳಿಗೆ ಪ್ರತ್ಯೇಕ ಮಾರುಕಟ್ಟೆ, ಮೌಲ್ಯವರ್ಧನೆ ಘಕಟಗಳನ್ನು ಸ್ಥಾಪಿಸಿ, ಕೃಷಿ ಪದ್ಧತಿಯನ್ನು ಉತ್ತೇಜಿಸಬೇಕು’ ಎಂದು ಹೇಳಿದರು.

ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ವಿ.ಎಲ್. ಮಧುಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಹೈದರಾಬಾದ್‌ನ ರಾಷ್ಟ್ರೀಯ ಕೃಷಿ ನಿರ್ವಹಣಾ ಸಂಸ್ಥೆಯ ಮಹದೇವಸ್ವಾಮಿ, ಬೆಂಗಳೂರು ವಿಶ್ವವಿದ್ಯಾಲಯದ ತರಬೇತಿ ಘಟಕದ ಮುಖ್ಯಸ್ಥ ಕೆ. ಶಿವರಾಮು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT