ಸೋಮವಾರ, ಸೆಪ್ಟೆಂಬರ್ 20, 2021
27 °C

ಮೂರು ದಿನಗಳಲ್ಲೀ 1.87 ಲಕ್ಷ ಗಣೇಶ ವಿಸರ್ಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಮೂರು ದಿನಗಳಿಗೆ ಸೀಮಿತವಾಗಿ ಮಾತ್ರ ಆಚರಿಸಬಹುದು ಎಂದು ಬಿಬಿಎಂಪಿಯು ಆದೇಶ ಮಾಡಿದ್ದರೂ, ಕೆಲವೆಡೆ ಅದರ ನಂತರವೂ ಗಣೇಶೋತ್ಸವ ಮುಂದುವರಿದಿದೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಬಾರದು ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯು ಪಾಲಿಕೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತ್ತು. ‌ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕ ಗಣೇಶೋತ್ಸವಕ್ಕೆ ಐದು ದಿನ ಅವಕಾಶ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಬಹುದು ಎಂದು ಬಿಬಿಎಂಪಿ ನಿಲುವು ಬದಲಾಯಿಸಿತ್ತು. ವಾರ್ಡ್‌ಗೆ ಒಂದೇ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವ ನಿರ್ಬಂಧವನ್ನೂ ಸಡಿಲಿಸಿತ್ತು.

ನಗರದಲ್ಲಿ ಭಾನುವಾರ 72,068 ವಿಗ್ರಹಗಳನ್ನು ವಿಸರ್ಜಿಸಲಾಗಿದೆ. ಮೂರು ದಿನಗಳಲ್ಲಿ ಒಟ್ಟು 1.87 ಲಕ್ಷ ಗಣೇಶ ವಿಗ್ರಹಗಳನ್ನು ಬಿಬಿಎಂಪಿ ನಿರ್ಮಿಸಿದ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲಾಗಿದೆ. 

ಈ ಹಿಂದೆ 40ಕ್ಕೂ ಅಧಿಕ ಕೆರೆಗಳಲ್ಲಿ ಗಣೇಶ ವಿಸರ್ಜನೆಗೆ ಅನುಮತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ 12 ಕೆರೆಗಳ ಕಲ್ಯಾಣಿಗಳಲ್ಲಿ ಮಾತ್ರ ಸಾರ್ವಜನಿಕ ಗಣೇಶ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ.

‘ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕೆರೆಯ ಕಲ್ಯಾಣಿಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನೆ ಪ್ರಮಾಣ ತುಂಬಾ ಕಡಿಮೆ ಇದೆ. ಕೆರೆಗಳ ಮಾಲಿನ್ಯದ ಪ್ರಮಾಣವೂ ಕಡಿಮೆಯಾಗಿದೆಯೇ ಎಂಬ ಬಗ್ಗೆ ಇನ್ನೂ ವಿಶ್ಲೇಷಣೆ ನಡೆಸಿಲ್ಲ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಿ.ರಂದೀಪ್‌ ತಿಳಿಸಿದರು.

‘ಬಹುತೇಕ ವಾರ್ಡ್‌ಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಭಾನುವಾರವೇ ಪೂರ್ಣಗೊಂಡಿದೆ. ಒಳಾಂಗಣದಲ್ಲಿ ಕೆಲವು ಕಡೆ 11 ದಿನಗಳವರೆಗೂ ಗಣೇಶೋತ್ಸವ ಆಚರಿಸಲಾಗುತ್ತಿದೆ. ಕೆಲವು ಸಮಿತಿಗಳು ಮೂರು ದಿನಗಳ ನಂತರವೂ ಗಣೇಶ ಪ್ರತಿಷ್ಠಾಪನೆ ನಡೆಸಿ ಉತ್ಸವ ಆಚರಿಸುತ್ತಿವೆ’ ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ ರಾಜು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು