ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ಅಧಿಕಾರಿಗಳ ವರ್ಗಾವಣೆ, ಹಸ್ತಕ್ಷೇಪಕ್ಕೆ ‌ಗರಂ

Last Updated 21 ಜನವರಿ 2020, 22:09 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು ತಮ್ಮ ಹುದ್ದೆಗೆ ಯೋಗ್ಯರಿದ್ದಾರೆಯೇ ಎಂದು ಪ್ರಶ್ನಿಸಬೇಕಾಗಿದೆ’ ಎಂದು ಹೈಕೋರ್ಟ್‌ ಕಿಡಿ ಕಾರಿದೆ.

‘ಬಿಬಿಎಂಪಿ ಎಂಜಿನಿಯರ್‌ ವರ್ಗಾವಣೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೀಡಿದ್ದ ಶಿಫಾರಸು ಪತ್ರ ಕಾನೂನುಬಾಹಿರ’ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿದ್ದ ಪ್ರಕರಣದಲ್ಲಿ ನ್ಯಾಯಮೂರ್ತಿ ರವಿ ಮಳಿಮಠ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿತು.

‘ಸ್ವಾಯತ್ತ ಸಂಸ್ಥೆ ಅಧಿಕಾರಿಗಳ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳು ಮೂಗು ತೂರಿಸಬಾರದು’ ಎಂಬ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಆದೇಶವನ್ನು ಎತ್ತಿಹಿಡಿದಿರುವ ನ್ಯಾಯಪೀಠ, ‘ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ಯಾವುದೇ ತಪ್ಪಿಲ್ಲ. ಅದು ಅತ್ಯಂತ ಸಮರ್ಪಕವಾಗಿದೆ. ಆಯುಕ್ತರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದು ಈ ಪ್ರಕರಣದಲ್ಲಿ ವೇದ್ಯವಾಗಿದೆ’ ಎಂದು ಅಭಿಪ್ರಾಯಪಟ್ಟು, ಮೇಲ್ಮನವಿ ವಜಾಗೊಳಿಸಿದೆ.

ಏನಿದು ಪ್ರಕರಣ?: ಕೆ.ಎಂ ವಾಸು ಅವರನ್ನು 2020ರ ಮಾರ್ಚ್‌ 10ರವರೆಗೆ ಬಿಬಿಎಂಪಿ ಹೆಬ್ಬಾಳ ವಲಯದ ಕಾರ್ಯಕಾರಿ ಎಂಜಿನಿಯರ್ ಹುದ್ದೆಗೆ ನಿಯೋಜನೆಗೊಳಿಸಿ 2019ರ ಫೆಬ್ರುವರಿ 22ರಂದು ಆದೇಶ ಹೊರಡಿಸಲಾಗಿತ್ತು.

ಏತನ್ಮಧ್ಯೆ, ವಾಸು ಅವರ ಜಾಗಕ್ಕೆ ಬಿಬಿಎಂಪಿಯಲ್ಲಿ ಎರವಲು ಸೇವೆಯಡಿ ನಿಯೋಜನೆಗೊಂಡಿರುವ ಲೋಕೋಪಯೋಗಿ ಇಲಾಖೆ ಕಾರ್ಯಕಾರಿ ಎಂಜಿನಿಯರ್ ಜಿ.ಆರ್. ದೇವೇಂದ್ರ ನಾಯಕ್ ಅವರನ್ನು ನಿಯೋಜಿಸುವಂತೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು 2019ರ ಅಕ್ಟೋಬರ್‌ 6ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಈ ಪತ್ರದ ಟಿಪ್ಪಣಿ ಅನುಸರಿಸಿ ಮುಖ್ಯಮಂತ್ರಿಗಳು ಅಕ್ಟೋಬರ್ 17ರಂದು ಸೂಕ್ತ ಕ್ರಮ ಜರುಗಿಸಿ ಎಂದು ಸೂಚಿಸಿದ್ದರು. ಅಂತೆಯೇ ಎರಡನೇ ಬಾರಿಗೆ ಸದಾನಂದ ಗೌಡ ಅವರು ಆಯುಕ್ತರಿಗೆ ಪತ್ರ ಬರೆದಿದ್ದರು. ಇದರನ್ವಯ ಆಯುಕ್ತರು ಅಕ್ಟೋಬರ್ 24ರಂದು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದರು.

ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ವಾಸು, ‘ನನ್ನ ಅವಧಿಪೂರ್ವ ವರ್ಗಾವಣೆ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿತ್ತು. ವಾಸು ಪರ ಹಿರಿಯ ವಕೀಲ ಎ.ಎಸ್‌.ಪೊನ್ನಣ್ಣ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT