ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಗುಂಡಿ ಮುಚ್ಚಲು ಯುದ್ಧೋಪಾದಿ ಕಾಮಗಾರಿಗೆ ಬಿಬಿಎಂಪಿ ಆಡಳಿತಾಧಿಕಾರಿ ಸೂಚನೆ

Last Updated 5 ನವೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್‌ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ‘ನಾಗರಿಕರೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಪಾಲಿಕೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸ್ಥಳೀಯವಾಗಿ ಸಮಸ್ಯೆಗಳಿದ್ದರೆ ಬಗೆಹರಿಸಿಕೊಂಡು ಕಾರ್ಯನಿರ್ವಹಿಸಬೇಕು. ಸ್ಥಳೀಯ ಪ್ರತಿನಿಧಿಗಳೊಂದಿಗೂ ಸಮನ್ವಯ ಸಾಧಿಸಿ ರಸ್ತೆ ಗುಂಡಿಗಳನ್ನು ನಿಗದಿತ ಅವಧಿಯೊಳಗೆ ಮುಚ್ಚಬೇಕು’ ಎಂದು ತಾಕೀತು ಮಾಡಿದರು.

ಮುಖ್ಯರಸ್ತೆ, ಉಪ ಮುಖ್ಯರಸ್ತೆ ಮತ್ತು ವಾರ್ಡ್‌ ರಸ್ತೆಗಳನ್ನು ಗುರುತಿಸಿಕೊಂಡು ಯೋಜನೆ ರೂಪಿಸಬೇಕು. ಅದಕ್ಕೆ ಅನುಸಾರವಾಗಿಯೇ ಕೆಲಸ ಮಾಡಬೇಕು. ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ಗಳು ಖುದ್ದು ಪರಿಶೀಲನೆ ನಡೆಸಬೇಕು. ಗುಂಡಿ ಮುಚ್ಚುವ ಕೆಲಸದ ಬಗ್ಗೆ ನಿತ್ಯ ವರದಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

8 ವಲಯಗಳ ಡಾಂಬರ್ ಮಿಶ್ರಣ ಮಾಡಲು 5 ಏಜೆನ್ಸಿಗಳನ್ನು ನಿಯೋಜನೆ ಮಾಡಲಾಗಿದೆ. ರಾತ್ರಿ ವೇಳೆ ಸಂಚಾರ ದಟ್ಟಣೆ ಕಡಿಮೆ ಇರುವ ಸಂದರ್ಭದಲ್ಲಿ ಹೆಚ್ಚಿನ ತಂಡಗಳನ್ನು ನಿಯೋಜಿಸಿ ಗುಂಡಿ ಮುಚ್ಚಬೇಕು ಎಂದು ತಿಳಿಸಿದರು.

ರಸ್ತೆ ಗುಂಡಿ ಮುಚ್ಚುವ ಜತೆಗೆ ಪಾದಚಾರಿ ಮಾರ್ಗಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವ ಅವಶ್ಯಕತೆಯೂ ಇದೆ. ರಾಜಕಾಲುವೆಗಳ ಅಭಿವೃದ್ಧಿ, ಕಸದ ಸಮಸ್ಯೆ ನಿವಾರಣೆ, ಪಾದಚಾರಿ ಕೆಳಸೇತುವೆ, ಸಾರ್ವಜನಿಕರ ಶೌಚಾಲಯಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT