ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ: ಕಟ್ಟುನಿಟ್ಟಿನ ಜಾರಿಗೆ ಅಧಿಕಾರಿಗಳ ನಿರ್ಧಾರ

ಕೋವಿಡ್‌ ಹೆಚ್ಚಳ ಹಿನ್ನೆಲೆ: ರಾತ್ರಿ 10 ಗಂಟೆಯಿಂದ, ಬೆಳಗ್ಗೆ 5 ಗಂಟೆ ವರೆಗೆ ನಿರ್ಬಂಧ
Last Updated 3 ಆಗಸ್ಟ್ 2021, 1:37 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೋವಿಡ್‌ ‍ಪ್ರಕರಣಗಳು ನಿಧಾನಗತಿಯಲ್ಲಿ ಹೆಚ್ಚಳ ಕಾಣುತ್ತಿರುವುದರಿಂದ ರಾತ್ರಿ ವೇಳೆ ಕೋವಿಡ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿವೆ.

ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ಸೋಮವಾರ ನಡೆದ ಬಿಬಿಎಂಪಿ ಮತ್ತು ಪೊಲೀಸ್‌ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲೂ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ, ‘ನಗರದಲ್ಲಿ ಕೋವಿಡ್ ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ಕರ್ಫ್ಯೂ ಈಗಲೂ ಜಾರಿಯಲ್ಲಿದೆ. ಆದರೆ, ಅದು ಕಟ್ಟುನಿಟ್ಟಾಗಿ ಅನುಷ್ಠಾನ ಆಗುತ್ತಿಲ್ಲ. ಅದನ್ನು ಸಮರ್ಪಕವಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಯ ಸಹಕಾರ ಅಗತ್ಯ’ ಎಂದು ಸಭೆಯಲ್ಲಿ ತಿಳಿಸಿದರು.

ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ‘ನಗರದಲ್ಲಿ ಕೋವಿಡ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಪಾಲಿಕೆ ಹಾಗೂ ಪೊಲೀಸ್ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕೋವಿಡ್ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಆ ಬಳಿಕವೂ ನಿಯಮ ಪಾಲಿಸದಿದ್ದಲ್ಲಿ ದಂಡ ವಿಧಿಸಬೇಕು. ಅಗತ್ಯ ಬಿದ್ದರೆ, ಪ್ರಕರಣಗಳನ್ನು ದಾಖಲಿಸುವುದಕ್ಕೂ ಹಿಂದೇಟು ಹಾಕಬಾರದು’ ಎಂದು ಸೂಚನೆ ನೀಡಿದರು.

‘ಕೇರಳ, ಮಹಾರಾಷ್ಟ್ರದಿಂದ ಸಾಕಷ್ಟು ಪ್ರಯಾಣಿಕರು ನಗರಕ್ಕೆ ಬರುತ್ತಿದ್ದಾರೆ.ಈ ಎರಡೂ ರಾಜ್ಯಗಳಿಂದ ಬರುವವರು 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ತರವುದು ಕಡ್ಡಾಯ. ಒಂದು ವೇಳೆ ಅವರು ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಹೊಂದಿಲ್ಲದಿದ್ದರೆ ಪಾಲಿಕೆಯ ಆರೋಗ್ಯ ತಂಡವು ಅವರನ್ನು ಕೋವಿಡ್‌ ಪರೀಕೆಗೆ ಒಳಪಡಿಸಲಿದೆ. ಪರೀಕ್ಷಾ ವರದಿ ಬರುವವರೆಗೆ ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ಬಸ್‌, ರೈಲು ಅಥವಾ ವಿಮಾನಗಳ ಮೂಲಕ ಬರುವವರನ್ನು ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಬೇಕು’ ಎಂದು ಗೌರವ್‌ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನಗರದ ಮಾರುಕಟ್ಟೆಗಳು, ಮಾಲ್‌ಗಳು, ಹೋಟೆಲ್‌ಗಳು, ದೇವಸ್ಥಾನಗಳು, ರೆಸ್ಟೋರಂಟ್‌ಗಳು ಸೇರಿದಂತೆ ಹೆಚ್ಚು ಜನ ಸಂದಣಿ ಸೇರುವ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಪಾಲನೆ ಆಗುತ್ತಿಲ್ಲ. ಇಂತಹ ಕಡೆಗಳಿಗೆ ಪಾಲಿಕೆಯ ಅಧಿಕಾರಿಗಳ ತಂಡವು ಪೊಲೀಸ್ ಸಿಬ್ಬಂದಿ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಬೇಕು. ಈ ಬಗ್ಗೆ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಕೋವಿಡ್ ದೃಢಪಟ್ಟವರನ್ನು ಚಿಕಿತ್ಸೆ ನಿರ್ಧಾರ ಕೇಂದ್ರಗಳಲ್ಲೇ (ಟ್ರಯಾಜ್ ಸೆಂಟರ್‌) ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಅವರಿಗೆ ಎಂತಹ ಚಿಕಿತ್ಸೆ ಅಗತ್ಯ ಎಂಬ ಬಗ್ಗೆ ಮಾಹಿತಿ ನೀಡಬೇಕು. ಅವರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಿ, ಅಂತಹವರ ಪ್ರತ್ಯೇಕವಾಸಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಮೂರು ಹಾಗೂ ಅದಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ಪತ್ತೆಯಾಗುವ ಪ್ರದೇಶವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಗುರುತಿಸಬೇಕು’ ಎಂದರು.

ಬಿಬಿಎಂಪಿ ವಿಶೇಷ ಆಯುಕ್ತರಾದ ಡಿ.ರಂದೀಪ್, ಮನೋಜ್ ಜೈನ್, ಡಾ.ಹರೀಶ್ ಕುಮಾರ್, ರವೀಂದ್ರ, ದಯಾನಂದ್, ರೆಡ್ಡಿ ಶಂಕರ ಬಾಬು, ತುಳಸಿ ಮದ್ದಿನೇನಿ, ಹೆಚ್ಚುವರಿ ಪೊಲೀಸ್ ಕಮಿಷನರ್ ಮುರುಗನ್, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ವಲಯ ಡಿಸಿಪಿಗಳು, ಮುಖ್ಯ ಆರೋಗ್ಯ ಅಧಿಕಾರಿ ಡಾ.ಬಿ.ಕೆ.ವಿಜಯೇಂದ್ರ, ವಲಯ ಆರೋಗ್ಯಾಧಿಕಾರಿಗಳು ಸಲಹೆ ನೀಡಿದರು.

‘ಗಡಿ ತಪಾಸಣೆ ಠಾಣೆಗಳಲ್ಲೂ ಪರಿಶೀಲನೆ’
‘ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ನಗರಕ್ಕೆ ರಸ್ತೆಗಳ ಮೂಲಕ ಆಗಮಿಸುವರನ್ನು ಗಡಿ ತಪಾಸಣಾ ಠಾಣೆಗಳ ಬಳಿ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಈ ರಾಜ್ಯಗಳ ಪ್ರಯಾಣಿಕರು 72 ಗಂಟೆಳ ಈಚೆಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ಪರಿಶೀಲಿಸಲು ತಪಾಸಣಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ತಪಾಸಣಾ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಿದ್ದೇವೆ’ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

‘ಆರ್‌ಟಿಪಿಸಿಆರ್ ವರದಿ ಇಲ್ಲದ ಪ್ರಯಾಣಿಕರನ್ನು ಕೋವಿಡ್‌ ಪರೀಕ್ಷೆ ನಡೆಸಲು ಹಾಗೂ ವರದಿ ಬರುವರೆಗೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ಕ್ರಮ ಕೈಗೊಂಡಿದ್ದೇವೆ. ಈ ಸಂಬಂಧ ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಜೊತೆಗೂ ಚರ್ಚಿಸಿದ್ದೇವೆ’ ಎಂದರು.

‘ಕೋವಿಡ್‌ ನಿಯಮ ಉಲ್ಲಂಘಿಸಿದರೆ ಮೊಕದ್ದಮೆ’
‘ನಗರದಲ್ಲಿ ಕೋವಿಡ್ ನಿಯಂತ್ರಿಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು. ಕೊವಿಡ್ ನಿಯಮಗಳನ್ನು ಪಾಲಿಸದಿರುವವರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುವುದು’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT