ಗುರುವಾರ , ಮಾರ್ಚ್ 23, 2023
30 °C

ತಿಂಗಳಾಂತ್ಯದಲ್ಲಿ ಶೇ 70 ಜನರಿಗೆ ಲಸಿಕೆ ವಿತರಣೆ: ಗೌರವ್ ಗುಪ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಶೇ 50ರಷ್ಟು ಮಂದಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಲಾಗಿದೆ. ಜುಲೈ ಅಂತ್ಯದ ವೇಳೆಗೆ ಶೇ 70ರಷ್ಟು ಜನರಿಗೆ ಲಸಿಕೆ ಹಾಕುವ ಗುರಿ ಇದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಾಕ್‌ಡೌನ್‌ ಸಡಿಲಿಕೆ ಇದೆ ಎಂದು ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ, ನಗರದಲ್ಲಿ ಖಂಡಿತ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಲಿವೆ’ ಎಂದೂ ಎಚ್ಚರಿಸಿದರು.

‘ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ. ಲಸಿಕೆ ಹಾಕಿಸಿಕೊಳ್ಳಲು ನಿರ್ಲಕ್ಷ್ಯ ವಹಿಸಿದರೂ ಮುಂದಿನ ದಿನಗಳಲ್ಲಿ ಸೋಂಕಿನ ಭೀತಿ ಎದುರಿಸಬೇಕಾಗುತ್ತದೆ’ ಎಂದರು. 

‘ಬಿಬಿಎಂಪಿ ವ್ಯಾಪ್ತಿಯಲ್ಲಿ ತಿಂಗಳ ಹಿಂದೆ ನಿತ್ಯ 20 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದವು. ಈಗ ಪ್ರಕರಣಗಳ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಈ ಕಾರಣದಿಂದ ನಗರದಲ್ಲಿ ಎಲ್ಲ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ’ ಎಂದರು. 

‘ನಗರದ ಸಾರ್ವಜನಿಕ ಸ್ಥಳ, ವ್ಯಾಪಾರ– ವಹಿವಾಟು ನಡೆಯುವ ಸ್ಥಳ, ಮದುವೆ ಸಮಾರಂಭ, ಮಾರುಕಟ್ಟೆ ಪ್ರದೇಶಗಳಲ್ಲಿ ಕೋವಿಡ್ ಮಾರ್ಗಸೂಚಿಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಮಾರ್ಷಲ್‌ಗಳು, ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿಗೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ’ ಎಂದು ಗೌರವ್ ಗುಪ್ತ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು