ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜಕಾಲುವೆ ಒತ್ತುವರಿ ತೆರಿವಿಗೆ ನಿರ್ದಾಕ್ಷಿಣ್ಯ ಕ್ರಮ’

ಮಳೆ ಪ್ರದೇಶಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ
Last Updated 18 ಮೇ 2022, 20:41 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಕೆಲವೆಡೆ ಜನ ರಾಜಕಾಲುವೆ ಮೇಲೆ ಮನೆ ಕಟ್ಟಿಕೊಂಡು ನೀರಿನ ಹರಿವಿಗೆ ಅಡಚಣೆ ಉಂಟುಮಾಡುತ್ತಿದ್ದಾರೆ. ಇನ್ನು ಕೆಲವು ಕಡೆ ಕಾಲುವೆಯ ದಿಕ್ಕು ಬದಲಿಸಿದ್ದಾರೆ. ರಾಜಕಾಲುವೆ ಎಲ್ಲೆಲ್ಲಿ ಒತ್ತುವರಿಯಾಗಿದೆ ಎಂದು ಗುರುತಿಸಿದ್ದೇವೆ. ಕೆಲವೇ ಜನರಿಂದಾಗಿ ಇಡೀ ಊರಿಗೆ ತೊಂದರೆ ಆಗುವುದು ಬೇಡ. ಒತ್ತುವರಿಗಳೆಲ್ಲವನ್ನೂ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಬೆಂಗಳೂರಿನಲ್ಲಿ 90 ಮಿ.ಮೀ.ಗಿಂತ ಹೆಚ್ಚು ಮಳೆ ಆದಾಗಲೆಲ್ಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಸಹಜ.ಭೌಗೋಳಿಕವಾಗಿ ಇಳಿಜಾರು ಇರುವ ಕಡೆಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರಿನ ಹರಿವಿಗೆ ಅಡ್ಡಿಯಾಗುವ ಕಡೆ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುತ್ತೇವೆ’ ಎಂದರು.

‘ಬಿಬಿಎಂಪಿ ವ್ಯಾಪ್ತಿಯಲ್ಲಿ 842 ಕಿ.ಮೀ ಉದ್ದದ ರಾಜಕಾಲುವೆಗಳಿದ್ದು, 400 ಕಿ.ಮೀ ಕಾಲುವೆ ಅಭಿವೃದ್ಧಿ ಆಗಿದೆ. ಕೆಲವು ಕಡೆ ಕಾಮಗಾರಿ ಬಾಕಿ ಇದೆ. ಮಳೆಯಿಂದ ಪದೇ ಪದೇ ಅನಾಹುತ ಸಂಭವಿಸುವುದನ್ನು ತಡೆಯಲು ₹ 600 ಕೋಟಿ ಮೊತ್ತದ ಕ್ರಿಯಾಯೋಜನೆ ರೂಪಿಸಿದ್ದು,ಅನುದಾನವನ್ನೂ ಒದಗಿಸಿದ್ದೇವೆ. ಈ ವರ್ಷವೇ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದೇವೆ. ಈ ಕಾಮಗಾರಿ ಪೂರ್ಣಗೊಳ್ಳದ ಹೊರತು ಸಮಸ್ಯೆ ಬಗೆಹರಿಯುವುದಿಲ್ಲ. ದ್ವಿತೀಯ ಮತ್ತು ತೃತೀಯ ಹಂತದ ರಾಜಕಾಲುವೆಗಳನ್ನೂ ದುರಸ್ತಿಪಡಿಸಿ
ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ನಮ್ಮ ಉದ್ದೇಶ’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಕಂದಾಯ ಸಚಿವರಾದ ಆರ್.ಅಶೋಕ, ತೋಟಗಾರಿಕಾ ಸಚಿವ ಮುನಿರತ್ನ, ಶಾಸಕ ಸಿ.ಟಿ.ರವಿ,
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ದಕ್ಣಿಣ ವಲಯ ಆಯುಕ್ತರಾದ ತುಳಸಿ ಮದ್ದಿನೇನಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿ.ಎಂ. ಪರಿವೀಕ್ಷಣೆ ಇಂದು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಅವರು ಗುರುವಾರ ಭೇಟಿ ನೀಡಲಿದ್ದಾರೆ ಎಂದು ಕಚೇರಿಯ ಪ್ರಕಟಣೆ ತಿಳಿಸಿದೆ.

‘ಶಾಶ್ವತ ಪರಹಾರ ಒದಗಿಸಿ’

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್‌ನ ದತ್ತಾತ್ರೇಯ ನಗರ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಐಡಿಯಲ್ ಬಡಾವಣೆಯಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಅವರು ಸಂತ್ರಸ್ತರ ಅಹವಾಲು ಆಲಿಸಿದರು.

‘ಮಳೆಯಿಂದ ಬದುಕೇ ನಾಶವಾಗಿದೆ‌. ಸರ್ವಸ್ವವನ್ನೂ ಕಳೆದುಕೊಂಡಿದ್ದೇವೆ. ಮಳೆ ಬಂದಾಗ ಭರವಸೆ ನೀಡಿ ಮರಳಿದ ಬಳಿಕ ಯಾರೂ ಇತ್ತ ತಲೆ ಹಾಕುವುದಿಲ್ಲ. ನಮಗೆ ಶಾಶ್ವತ ಪರಿಹಾರ ಬೇಕು‌’ ಎಂದು ಸಂತ್ರಸ್ತರು ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT