ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಕ್ಷಣವಿಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ‌: ಪಾಲಿಕೆ ಚಿಂತನೆ

ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಕೊರೊನಾ ಚರ್ಚೆ * ಇನ್ನು ಸಾಂಸ್ಥಿಕ ಕ್ವಾರಂಟೈನ್‌ ಇಲ್ಲ– ಆಯುಕ್ತ
Last Updated 30 ಜೂನ್ 2020, 21:06 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇದೇ ಪ್ರಮಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಹೋದರೆ ಸೋಂಕಿನ ಲಕ್ಷಣ ಇಲ್ಲದವರಿಗೆ ಅಥವಾ ಸಣ್ಣಪುಟ್ಟ ಲಕ್ಷಣ ಇರುವವರಿಗೆ ಮನೆಯಲ್ಲೇ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಬಹುದು ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್ ತಿಳಿಸಿದರು.

ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು, ‘ಈ ಹಿಂದೆ ರೋಗ ಲಕ್ಷಣ ಇಲ್ಲದ ಸೋಂಕಿತರಿಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅಂತಹವರನ್ನು ಜನರಿಂದ ಪ್ರತ್ಯೇಕ ಪಡಿಸುವ ಸಲುವಾಗಿ 22 ಕೋವಿಡ್‌ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗಿದೆ. ಅಲ್ಲಿ ಒಟ್ಟು 17,705 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ಗಂಭೀರ ಸಮಸ್ಯೆ ಇರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ’ ಎಂದರು.

‘ಕೊರೊನಾ ಸೋಂಕಿತರ ನೇರ ಅಥವಾ ಪರೋಕ್ಷ ಸಂಪರ್ಕ ಹೊಂದಿದವರನ್ನು ಸಾಂಸ್ಥಿಕ ಪ್ರತ್ಯೇಕವಾಸಕ್ಕೆ (ಕ್ವಾರಂಟೈನ್‌) ಒಳಪಡಿಸಲಾಗುತ್ತಿದೆ. ಇನ್ನು ಇದನ್ನೂ ನಿಲ್ಲಿಸಲಿದ್ದು, ಅವರು ಮನೆಯಲ್ಲೇ ಪ್ರತ್ಯೇಕ ವಾಸ ಅನುಭವಿಸುವಂತೆ ಸೂಚಿಸಲಾಗುತ್ತದೆ’ ಎಂದು ತಿಳಿಸಿದರು.

ಪೋರ್ಟಲ್‌ನಲ್ಲಿ ವರದಿ:‘ಖಾಸಗಿ ಆಸ್ಪತ್ರೆ ಅಥವಾ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಿಕೊಂಡವರ ಅಥವಾ ಸೋಂಕಿತರ ಮಾಹಿತಿಯನ್ನು ಐಸಿಎಂಆರ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸುವಂತೆ ಖಾಸಗಿ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಅದರಲ್ಲಿ ಮಾಹಿತಿ ಲಭಿಸಿದ ಕೂಡಲೇ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಅಥವಾ ಆಸ್ಪತ್ರೆಗೆ ದಾಖಲಿಸಲಿದ್ದಾರೆ’ ಎಂದರು.

‘ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವ ಅನುಕೂಲವಾಗಲು 88 ಆಂಬುಲೆನ್ಸ್‌ ಬಾಡಿಗೆ ತೆಗೆದುಕೊಳ್ಳಲಾಗಿದೆ. ಪೂರ್ವ, ಪಶ್ಚಿಮ ಮತ್ತು ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು ಬರುತ್ತಿರುವುದರಿಂದ ಒಂದೊಂದು ಪ್ರದೇಶಕ್ಕೆ ತಲಾ 10 ಆಂಬುಲೆನ್ಸ್‌ ನೀಡಲಾಗಿದೆ‘ ಎಂದರು.

ಪರೀಕ್ಷೆ ಸಂಖ್ಯೆ ಹೆಚ್ಚಳ: ‘ಈ ಮೊದಲು ದಿನಕ್ಕೆ ಸರಾಸರಿ 2 ಸಾವಿರ ಜನರ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಸರಾಸರಿ 5 ಸಾವಿರ ಜನರನ್ನು ಪರೀಕ್ಷಿಸಲಾಗುತ್ತಿದೆ‘ ಎಂದರು.

ಪೌರಕಾರ್ಮಿಕರಿಗೆ ಹೆಚ್ಚಿನ ಸೌಲಭ್ಯ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್‌ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT