ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19: 4,000 ಹೆಚ್ಚುವರಿ ಹಾಸಿಗೆಗೆ ಬಿಬಿಎಂಪಿ ಬೇಡಿಕೆ

ಕೋವಿಡ್‌ ನಿಯಂತ್ರಣಕ್ಕೆ ಸಚಿವ ಡಾ.ಕೆ. ಸುಧಾಕರ್‌ ಸಭೆ
Last Updated 8 ಏಪ್ರಿಲ್ 2021, 15:59 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ರೋಗಿಗಳ ಚಿಕಿತ್ಸೆಗಾಗಿ ಮುಂದಿನ ಹತ್ತು ದಿನಗಳವರೆಗೆ ನಗರದ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 4,000 ಹಾಸಿಗೆಗಳನ್ನು ಕಾಯ್ದಿರಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಇಲಾಖೆಗೆ ಬೇಡಿಕೆ ಸಲ್ಲಿಸಿದೆ.

ಬಿಬಿಎಂಪಿ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಬುಧವಾರ ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತಾ, ಹೆಚ್ಚುವರಿ ಹಾಸಿಗೆಗಳಿಗೆ ಬೇಡಿಕೆ ಸಲ್ಲಿಸಿದರು.

ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್‌, ‘ಈಗಾಗಲೇ 1,000 ಹಾಸಿಗೆಗಳನ್ನು ಬಿಬಿಎಂಪಿ ಮೂಲಕ ಬಳಕೆಗಾಗಿ ಕಾಯ್ದಿರಿಸಲಾಗಿದೆ. ಹೆಚ್ಚುವರಿಯಾಗಿ 4,000 ಹಾಸಿಗೆಗಳಿಗೆ ಬೇಡಿಕೆ ಬಂದಿದೆ. ಆಸ್ಪತ್ರೆಗಳ ಮುಖ್ಯಸ್ಥರ ಜತೆ ಸಭೆ ನಡೆಸಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಶೇಕಡ 50 ರಷ್ಟು ಹಾಸಿಗೆಗಳನ್ನು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಮೀಸಲಿಡುವಂತೆ ಸೂಚಿಸಲಾಗಿದೆ. ಮೀಸಲಿಟ್ಟ ಹಾಸಿಗೆಗಳಲ್ಲಿ ಅರ್ಧದಷ್ಟನ್ನು ಸರ್ಕಾರದ ಮೂಲಕ ಶಿಫಾರಸುಗೊಂಡ ರೋಗಿಗಳಿಗೆ ಒದಗಿಸುವುದನ್ನು ಕಡ್ಡಾಯ ಮಾಡಲಾಗುವುದು ಎಂದು ತಿಳಿಸಿದರು.

ನಿತ್ಯ 1 ಲಕ್ಷ ಪರೀಕ್ಷೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿದಿನ 5,000 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಆದ್ದರಿಂದ ಒಂದು ಪ್ರಕರಣಕ್ಕೆ 20 ಸಂಪರ್ಕಿತರಂತೆ ನಿತ್ಯ ಒಂದು ಲಕ್ಷ ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಹೇಳಿದರು.

8,500 ಮತಗಟ್ಟೆಗಳ ಹಂತದಲ್ಲಿ ಕೋವಿಡ್‌ ನಿಯಂತ್ರಣ ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಮೂಲಕ ಸೋಂಕಿತರ ಮೇಲೆ ನಿಗಾ ಇಡುವುದು, ಆಸ್ಪತ್ರೆಗೆ ದಾಖಲಿಸುವುದು, ಕೋವಿಡ್‌ ಪರೀಕ್ಷೆ ನಡೆಸುವ ಕೆಲಸವನ್ನು ಮಾಡಲಾಗುವುದು. 250 ಆಂಬುಲೆನ್ಸ್‌ಗಳನ್ನು ಒದಗಿಸಲಾಗಿದೆ. ಹೆಚ್ಚುವರಿಯಾಗಿ ವಾರ್ಡ್‌ಗೆ ತಲಾ ಒಂದು ಆಂಬುಲೆನ್ಸ್‌ ಒದಗಿಸಲು ಸಿದ್ಧತೆ ನಡೆದಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳ ಪಾಲನೆ ಮೇಲೆ ನಿಗಾ ವಹಿಸಲು 2,000 ಗೃಹ ರಕ್ಷಕರನ್ನು ನಿಯೋಜಿಸುವಂತೆ ಬಿಬಿಎಂಪಿ ಕೋರಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಬೆಂಗಳೂರು ನಗರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರದೇಶಗಳಲ್ಲೂ ಕೋವಿಡ್‌ ನಿಯಂತ್ರಣಕ್ಕೆ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT