ಬೆಂಗಳೂರು: ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಈ ವರ್ಷ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಬಿಬಿಎಂಪಿ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರಿಗೆ ಆದೇಶಿಸಿದ್ದಾರೆ.
ನ.1ರಂದು ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ ಹಾಡಿ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕು. ನಂತರ, ಕ್ರಮವಾಗಿ ‘ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’, ’ಎಲ್ಲಾದರು ಇರು ಎಂತಾದರು ಇರು’, ’ಒಂದೇ ಒಂದೇ ಕರ್ನಾಟಕ ಒಂದೇ’, ’ಹೊತ್ತಿತೋ ಹೊತ್ತಿತೋ ಕನ್ನಡದ ದೀಪ’, ’ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕು.
‘ಕರ್ನಾಟಕ ಸಂಭ್ರಮ-50– ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳ ಮೂಲಕ ಬಿಡಿಸುವಂತೆ ನಾಗರಿಕರಲ್ಲಿ ಮನವಿ ಮಾಡಬೇಕು.
ಎಲ್ಲಾ ಆಕಾಶವಾಣಿ ಕೇಂದ್ರಗಳಿಂದ (ರೇಡಿಯೊ) ಬೆಳಿಗ್ಗೆ 9 ಕ್ಕೆ ನಾಡಗೀತೆ ಪ್ರಸಾರವಾಗಲಿದ್ದು, ಎಲ್ಲರೂ ರಾಷ್ಟ್ರಗೀತೆಗೆ ಗೌರವ ಸಲ್ಲಿಸುವಂತೆ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು.
ಸಂಜೆ 5ಕ್ಕೆ ನಗರದ ಎಲ್ಲಾ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ‘ಸುವರ್ಣ ಸಂಭ್ರಮ ಗಾಳಿಪಟ ಉತ್ಸವ’ ಆಚರಿಸಬೇಕು.
ಸಂಜೆ 7ಕ್ಕೆ ನಗರದ ಎಲ್ಲಾ ಮನೆ, ಕಚೇರಿ ಹಾಗೂ ಅಂಗಡಿಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ‘ಕನ್ನಡ ಜ್ಯೋತಿ’ ಬೆಳಗುವಂತೆ ಬಿಬಿಎಂಪಿ ಸಿಬ್ಬಂದಿ ನಾಗರಿಕರಲ್ಲಿ ಮನವಿ ಮಾಡಿಕೊಳ್ಳಬೇಕು.
ನಗರದ ಆಟದ ಮೈದಾನಗಳು, ಉದ್ಯಾನಗಳು, ಕೆರೆ ಆವರಣ, ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಎಲ್ಲ ಕಾರ್ಯಕ್ರಮಗಳನ್ನು ಆಚರಿಸಬೇಕು. ಸಂಘ ಸಂಸ್ಥೆಗಳು, ಅಪಾರ್ಟ್‌ಮೆಂಟ್ ಸಂಘಗಳು, ಹೋಟೆಲ್ ಯೂನಿಯನ್‌ಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಆಯೋಜಿಸಬೇಕು ಎಂದು ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.