ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಜಾಹೀರಾತು : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಆದೇಶ

ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ: ಹೈಕೋರ್ಟ್‌ ಕಿಡಿ
Last Updated 9 ಫೆಬ್ರುವರಿ 2023, 21:35 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ಖಡಕ್‌ ಆದೇಶ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಆಕ್ಷೇಪಿಸಿ ನಗರದ ಸರಸ್ವತಿಪುರಂನ ಮಾಯಿಗೇ ಗೌಡ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ನಗರದಲ್ಲಿ ಅನಧಿಕೃತ ಹೋರ್ಡಿಂಗ್, ಫ್ಲೆಕ್ಸ್, ಪೋಸ್ಟರ್ ಅಳವಡಿಕೆಯನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾರ್ಚ್ 6ರೊಳಗೆ ಸಮಗ್ರ ವರದಿ ಸಲ್ಲಿಸಿ’ ಎಂದು ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ಬಿಡಿಎಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್‌ 7ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, ನಗರದ ವಿವಿಧೆಡೆ ಅಳವಡಿಸಿರುವ ಹಲವು ಜಾಹೀರಾತುಗಳ ಫೋಟೊ ಮತ್ತು ಅವುಗಳ ಕುರಿತ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

‘ಸ್ಥಳೀಯ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಜಾಹಿರಾತು ಫಲಕ ಅಳವಡಿಸಿದವರ ವಿರುದ್ಧ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮೂರು ವರ್ಷಗಳ ಹಿಂದೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಆದರೂ, ನಗರದಾದ್ಯಂತ ಅನಧಿಕೃತ ಜಾಹಿರಾತುಗಳ ಪ್ರದರ್ಶನ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸುತ್ತಿಲ್ಲ’ ಎಂದು ಆಕ್ಷೇಪಿಸಿದರು.

ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ (ಕೋರ್ಟ್‌ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ವಿಕ್ರಂ ಹುಯಿಲಗೋಳ, ‘ಅನಧಿಕೃತ ಜಾಹೀರಾತು ಪ್ರದರ್ಶನಗಳು ಮತ್ತು ಫಲಕಗಳ ಅವಳಡಿಕೆ ತಡೆಗಟ್ಟಲು ಹೈಕೋರ್ಟ್ ಈ ಹಿಂದೆ ಹಲವು ಬಾರಿ ನಿರ್ದೇಶನ ನೀಡಿದೆ. ಆದರೆ, ಸರ್ಕಾರ, ಬಿಡಿಎ ಮತ್ತು ಬಿಬಿಎಂಪಿಗಳ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ವಿಫಲವಾಗಿವೆ. ಜಾಹಿರಾತು ಫಲಕಗಳನ್ನು ಪ್ರದರ್ಶಿಸಲು ಬೈಲಾ ಪ್ರಕಾರ ಅನುಮತಿ ಪಡೆಯಲಾಗಿದೆ ಎಂಬ ಬಗ್ಗೆ ಯಾವುದೇ ಉಲ್ಲೇಖವೇ ಇಲ್ಲ’ ಎಂದು ದೂರಿದರು.

ಆಕ್ಷೇಪಣೆಗಳನ್ನು ಪರಿಗಣಿಸಿದ ನ್ಯಾಯಪೀಠ, ‘ತಪ್ಪಿತಸ್ಥ ಬಿಡಿಎ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕ್ರಮ ಜರುಗಿಸಬೇಕು. ಈ ಪ್ರಕ್ರಿಯೆಯನ್ನು ಮೂರು ವಾರಗಳಲ್ಲಿ ಮಾಡಬೇಕು. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು’ ಎಂದು ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT