ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಚ್ಛತೆ ಇಲ್ಲದ ಖಾಲಿ ನಿವೇಶನಗಳಿಗೆ ದಂಡ: ಬಿಬಿಎಂಪಿ ಮುಖ್ಯ ಆಯುಕ್ತ ಗಿರಿನಾಥ್‌

ಪಿಜಿಗಳಿಗೆ ಸದ್ಯವೇ ಮಾರ್ಗಸೂಚಿ ಪ್ರಕಟ
Published 5 ಆಗಸ್ಟ್ 2024, 16:01 IST
Last Updated 5 ಆಗಸ್ಟ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ಸ್ವಚ್ಛತೆ ಇಲ್ಲದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್‌ ನೀಡಿ, ದಂಡ ವಿಧಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಲಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ‘ಆಯಾ ವಲಯ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಪಟ್ಟಿ ಮಾಡಬೇಕು. ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟೀಸ್ ಜಾರಿಗೊಳಿಸಬೇಕು. ಪಾಲಿಕೆಯಿಂದ ಸ್ವಚ್ಛತೆ ಮಾಡಿ, ಮಾಲೀಕರಿಗೆ ದಂಡ ವಿಧಿಸಿ, ಇದು ಮರುಕಳಿಸದಂತೆ ಎಚ್ಚರಿಕೆ ನೀಡಬೇಕು’ ಎಂದು ಹೇಳಿದರು.

ಖಾಲಿ ನಿವೇಶನಗಳು ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿವೆಯೆ ಎಂಬುದನ್ನೂ ಪರಿಶೀಲಿಸಬೇಕು. ಇಲ್ಲದಿದ್ದರೆ, ಕೂಡಲೇ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ವಲಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಲಯ ವ್ಯಾಪ್ತಿಯ ಮುದ್ರಣಾಲಯಗಳಿಗೆ ನೋಟಿಸ್ ನೀಡಬೇಕು. ಅನಧಿಕೃತ ಜಾಹೀರಾತು ಮುದ್ರಿಸದಂತೆ ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಎಲ್ಲಿಯೂ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ವೈಟ್ ಟಾಪಿಂಗ್ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾಮಗಾರಿಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ವಿದ್ಯುತ್ ವಿಭಾಗದ ಸಿಬ್ಬಂದಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5ರಿಂದ ರಾತ್ರಿ 8.30ರವರೆಗೆ ಕಾರ್ಯನಿರ್ವಹಿಸಬೇಕಿದೆ. ಬೀದಿ ದೀಪಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾಗರಿಕರ ದೂರುಗಳಿಗೆ ಕೂಡಲೇ ಸ್ಪಂದಿಸಬೇಕು. ಎಲ್ಲೆಲ್ಲಿ ಬೀದಿದೀಪಗಳಿಲ್ಲವೋ ಅಲ್ಲೆಲ್ಲ ದೀಪ ಅಳವಡಿಸಲು ಕ್ರಮ ಕೈಗೊಳ್ಳಲು ಹೇಳಿದರು.

ನಗರದಲ್ಲಿರುವ ಪಿಜಿಗಳಿಗೆ (ಪೇಯಿಂಗ್‌ ಗೆಸ್ಟ್‌) ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದೆ. ವಸತಿ ಪ್ರದೇಶದಲ್ಲಿ ಪಿಜಿಗಳಿಗೆ ಅವಕಾಶ ನೀಡಲಾಗಿದ್ದು, ಭದ್ರತೆ, ಸಿಸಿ ಟಿವಿ ಕ್ಯಾಮೆರಾ ಸೇರಿದಂತೆ ರಾಷ್ಟ್ರೀಯ ಭದ್ರತಾ ನೀತಿಯ ಅನುಸಾರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಲಾಗಿದೆ ಎಂದು ತುಷಾರ್‌ ಗಿರಿನಾಥ್‌ ತಿಳಿಸಿದರು.

ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ರಮೇಶ್, ಶಿವಾನಂದ್, ಕರೀಗೌಡ, ರಮ್ಯಾ, ವಿನೋತ್ ಪ್ರಿಯಾ, ಪ್ರೀತಿ ಗೆಹ್ಲೋಟ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT