ಬೆಂಗಳೂರು: ಖಾಸಗಿ ಆಸ್ಪತ್ರೆಯೊಂದರ ಆರಂಭಕ್ಕೆ ಪರವಾನಗಿ ನೀಡಲು ₹ 40,000 ಲಂಚ ಪಡೆಯುತ್ತಿದ್ದ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ನಿರಂಜನ್ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಆಸ್ಪತ್ರೆಯೊಂದನ್ನು ಆರಂಭಿಸಲು ಅನುಮತಿ ಕೋರಿ ವ್ಯಕ್ತಿ
ಯೊಬ್ಬರು ಅರ್ಜಿ ಸಲ್ಲಿಸಿದ್ದರು. ಪರವಾನಗಿ ನೀಡಲು ₹ 1 ಲಕ್ಷ ಲಂಚ ನೀಡುವಂತೆ
ಡಿಎಚ್‌ಒ ಬೇಡಿಕೆ ಇಟ್ಟಿದ್ದರು. ನಂತರ ಮಾತುಕತೆ ನಡೆಸಿದಾಗ ₹ 40,000 ನೀಡಿದರೆ ಪರವಾನಗಿ ಪತ್ರ ನೀಡುವುದಾಗಿ ತಿಳಿಸಿದ್ದರು. ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು.
‘ಆರೋಪಿಯ ಸೂಚನೆಯಂತೆ ದೂರುದಾರರು ಶನಿವಾರ ಲಂಚದ ಹಣದೊಂದಿಗೆ ಭೇಟಿಯಾದರು. ಕಚೇರಿಯಿಂದ ಹೊರಬಂದ ಡಾ. ನಿರಂಜನ್ ಲಂಚದ ಹಣ ಪಡೆದುಕೊಂಡರು. ತಕ್ಷಣ ದಾಳಿಮಾಡಿದ ಲೋಕಾಯುಕ್ತದ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದರು’ ಎಂದು ಲೋಕಾಯುಕ್ತದ ಉನ್ನತ ಮೂಲಗಳು ತಿಳಿಸಿವೆ.
ಲೋಕಾಯುಕ್ತ ಪೊಲೀಸ್ ವಿಭಾಗದ ಎಸ್‌ಪಿ ಅಶೋಕ್ ಕೆ.ವಿ. ಅವರ ಮಾರ್ಗದರ್ಶನದಲ್ಲಿ
ಡಿವೈಎಸ್‌ಪಿ ಆ್ಯಂಟನಿ ಜಾನ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಾಥಮಿಕ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.