ಗುರುವಾರ , ಜೂನ್ 24, 2021
25 °C

ಬೆಂಗಳೂರು: 3,495 ಹೊಸ ಕೋವಿಡ್ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಶನಿವಾರ 3,495 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ 24 ಗಂಟೆಗಳಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದ್ದು, ಸೋಂಕಿತರ ಸಂಖ್ಯೆ 87 ಸಾವಿರ ದಾಟಿದೆ. 

15 ದಿನಗಳಲ್ಲಿ 32,136 ಮಂದಿ ಕೋವಿಡ್ ಪೀಡಿತರಾಗಿರುವುದು ಖಚಿತಪಟ್ಟಿದ್ದು, ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,142 ಮಂದಿ ಸೋಂಕಿತರಾಗಿದ್ದಾರೆ. ಹತ್ತು ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ 25 ರಷ್ಟು ಮಂದಿ ಆ ಭಾಗಕ್ಕೆ ಸೇರಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ಶೇ 16 ರಷ್ಟು ಪ್ರಕರಣಗಳು ವರದಿಯಾಗಿವೆ. ಸದ್ಯ 34 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ಸೋಂಕಿತರಲ್ಲಿ ಮತ್ತೆ 35 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ. ಹೊಸದಾಗಿ ದೃಢಪಟ್ಟ ಮರಣ ಪ್ರಕರಣಗಳಲ್ಲಿ 28 ವರ್ಷದ ಯುವಕ ಹಾಗೂ 38 ವರ್ಷದ ಪುರುಷ ಕೂಡ ಸೇರಿದ್ದಾರೆ. 27 ಮಂದಿ 50 ವರ್ಷ ಮೇಲ್ಪಟ್ಟವರಾಗಿದ್ದು, ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳನ್ನು ಹೊಂದಿದ್ದರು. 

ಗುಣಮುಖರ ಸಂಖ್ಯೆ 50 ಸಾವಿರ: ಸೋಂಕಿತರಲ್ಲಿ ಮತ್ತೆ 2,034 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 50 ಸಾವಿರದ ಗಡಿ ದಾಟಿದೆ. 15 ದಿನಗಳಲ್ಲಿ 34,530 ಮಂದಿ ಚೇತರಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಚೇತರಿಸಿಕೊಳ್ಳುವವರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

325 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 4,812 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಿದ ಗರಿಷ್ಠ ತಪಾಸಣೆಗಳು ಇವಾಗಿವೆ. ಈ ಚಿಕಿತ್ಸಾಲಯಗಳಲ್ಲಿ ಈವರೆಗೆ ಒಟ್ಟು 1.05 ಲಕ್ಷ ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.

ರಾಮನ್ ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡ
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸುತ್ತಿರವ ಇಂದಿರಾ ನಗರದ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಅವಘಡ (ಶಾರ್ಟ್ ಸರ್ಕ್ಯೂಟ್) ನಡೆದಿದ್ದು, ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 20 ರೋಗಿಗಳನ್ನು ವಿಕ್ಟೋರಿಯಾ ಸೇರಿದಂತೆ ನಗರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಆಕ್ಸಿಜನ್‌ ಸಿಲಿಂಡರ್‌ಗಳಿಂದ ಆಕ್ಸಿಜನ್ ಪೂರೈಕೆ ಮಾಡುವ ನಿಯಂತ್ರಣ ಘಟಕವು ಶಾರ್ಟ್‌ ಸರ್ಕ್ಯೂಟ್‌ನಿಂದ ಸ್ಫೋಟಗೊಂಡಿತ್ತು. ನಿಯಂತ್ರಣ ಘಟಕದ ಪಕ್ಕದಲ್ಲಿಯೇ ಆಕ್ಸಿಜನ್ ಸಿಲಿಂಡರ್‌ಗಳನ್ನು ಸಾಲಾಗಿ ಜೋಡಿಸಲಾಗಿತ್ತು. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. 

‘ಈ ಘಟನೆಯಿಂದ ರೋಗಿಗಳಿಗೆ ಯಾವುದೇ ಸಮಸ್ಯೆಯಾಗಲಿಲ್ಲ. ಆಸ್ಪತ್ರೆಯಲ್ಲಿ 120 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆ ವೇಳೆಗೆ ಈ ಘಟನೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಕೆಲ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಯಿತು. ಶನಿವಾರ ಬೆಳಿಗ್ಗೆ 3 ಗಂಟೆಯ ವೇಳೆಗೆ ಆಕ್ಸಿಜನ್‌ ಸಂಪರ್ಕ ವ್ಯವಸ್ಥೆಯನ್ನು ಸರಿ ಮಾಡಲಾಗಿತ್ತು. ಹಾನಿಯಾದ ಪರಿಕರಗಳನ್ನೂ ದುರಸ್ತಿ ಮಾಡಲಾಗಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಧಾಕೃಷ್ಣ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು