ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಟ್‌ ಕಾಯಿನ್ ಪ್ರಕರಣ: ಡಿವೈಎಸ್ಪಿ ಮತ್ತೆ ಪರಾರಿ

Published 4 ಜೂನ್ 2024, 16:16 IST
Last Updated 4 ಜೂನ್ 2024, 16:16 IST
ಅಕ್ಷರ ಗಾತ್ರ

ಬೆಂಗಳೂರು: ಬಿಟ್ ಕಾಯಿನ್ (ಬಿಟಿಸಿ) ಹಗರಣದ ಸಾಕ್ಷ್ಯಗಳನ್ನು ನಾಶಪಡಿಸಿದ್ದ ಪ್ರಕರಣದ ಆರೋಪಿಯಾಗಿರುವ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ ಮತ್ತೆ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಎಸ್‌ಐಟಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ಬಿಟ್ ಕಾಯಿನ್ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಬಂಧಿಸಿದ್ದ ಅಂದಿನ ಸಿಸಿಬಿ ಪೊಲೀಸರು, ಆತನಿಂದ ಹಲವು ವಸ್ತುಗಳನ್ನು ಜಪ್ತಿ ಮಾಡಿ ಸಾಕ್ಷ್ಯ ನಾಶಪಡಿಸಿದ್ದರು. ಈ ಸಂಬಂಧ ಅಂದಿನ ಸಿಸಿಬಿ ಇನ್‌ಸ್ಪೆಕ್ಟರ್‌ಗಳಾಗಿದ್ದ ಶ್ರೀಧರ್ ಪೂಜಾರ, ಲಕ್ಷ್ಮಿಕಾಂತಯ್ಯ, ಚಂದ್ರಾಧರ್, ಡಿ.ಎಂ. ಪ್ರಶಾಂತಬಾಬು ಹಾಗೂ ಸೈಬರ್ ತಜ್ಞ ಸಂತೋಷ್‌ಕುಮಾರ್ ವಿರುದ್ಧ ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಶಾಂತ್ ಹಾಗೂ ಸಂತೋಷ್‌ ಅವರನ್ನು ಬಂಧಿಸಲಾಗಿತ್ತು.

ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ ಶ್ರೀಧರ್ ಪೂಜಾರ, ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಜಾಮೀನು ಮಂಜೂರು ಆದೇಶವನ್ನು ಪ್ರಶ್ನಿಸಿದ್ದ ಎಸ್‌ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಜಾಮೀನು ರದ್ದಾಗುತ್ತಿದ್ದಂತೆ ಶ್ರೀಧರ್ ಪೂಜಾರ ನಗರದಿಂದ ಪರಾರಿಯಾಗಿದ್ದಾರೆ.

‘ಸಾಕ್ಷ್ಯ ನಾಶ ಪ್ರಕರಣದಲ್ಲಿ ಶ್ರೀಧರ್ ಪೂಜಾರ ಪಾತ್ರವಿದೆ. ನಿರೀಕ್ಷಣಾ ಜಾಮೀನು ಪಡೆದಿದ್ದ ಅವರು ಒಂದು ಬಾರಿ ಮಾತ್ರ ವಿಚಾರಣೆಗೆ ಬಂದು ಹೋಗಿದ್ದಾರೆ. ಇದೀಗ, ಜಾಮೀನು ರದ್ದಾಗಿದ್ದರಿಂದ ಅವರು ನಾಪತ್ತೆಯಾಗಿದ್ದಾರೆ. ಅವರ ಬಂಧನಕ್ಕೆ ತನಿಖೆ ಮುಂದುವರಿಸಲಾಗಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

‘ಬಂಧಿಸಲು ಹೋಗಿದ್ದ ಎಸ್‌ಐಟಿ ಅಧಿಕಾರಿಗಳ ಮೇಲೂ ಶ್ರೀಧರ್ ಪೂಜಾರ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣವೂ ದಾಖಲಾಗಿದೆ’ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT