ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧದ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪವನ್ನು ದೀರ್ಘಕಾಲ ಜೀವಂತವಾಗಿಡುವಂತೆ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿಯೇ ಸೋಮವಾರದಿಂದ ಸರಣಿ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ.
ಭ್ರಷ್ಟಾಚಾರದ ಆರೋಪದ ಕಾರಣದಿಂದಾಗಿಯೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿತ್ತು. ಈಗ ಅದೇ ಆರೋಪವನ್ನು ಕಾಂಗ್ರೆಸ್ ವಿರುದ್ಧದ ಪ್ರಬಲ ಅಸ್ತ್ರವನ್ನಾಗಿ ಬಳಸಿ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ.
ಈ ಕಾರ್ಯತಂತ್ರದ ಭಾಗವಾಗಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಸೋಮವಾರ ಭೇಟಿ ಮಾಡುವ ಸಾಧ್ಯತೆ ಇದೆ. ಈ ನಿಯೋಗವು, ಬಿಬಿಎಂಪಿ ಪ್ರಯೋಗಾಲಯದಲ್ಲಿ ನಡೆದಿರುವ ಅಗ್ನಿ ಅವಘಡದ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಲಿದೆ ಎಂದು ಗೊತ್ತಾಗಿದೆ.
ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ರೂಪುರೇಷೆ ನಿರ್ಧರಿಸುವುದಕ್ಕಾಗಿ ಬಿಜೆಪಿ ನಾಯಕರು ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸುವ ಕಾಂಗ್ರೆಸ್‌ನ ಪ್ರಯತ್ನಕ್ಕೆ ತಡೆಯೊಡ್ಡುವುದು ಈ ಕಾರ್ಯತಂತ್ರದ ಹಿಂದಿರುವ ಪ್ರಮುಖ ಉದ್ದೇಶ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.