ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೀಸಲಾತಿ ಸಂಬಂಧ ನೀಡಿದ ಹೇಳಿಕೆ ಖಂಡಿಸಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಲು ಮುಂದಾದ ವೇಳೆ ಪ್ರತಿಭಟನಕಾರರನ್ನು ಪೊಲೀಸರು ತಡೆದರು.
ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ, ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿ ಸಹ ಆ ಪರಂಪರೆಯನ್ನು ಮುಂದುವರೆಸಿದ್ದಾರೆ’ ಎಂದು ಟೀಕಿಸಿದರು.
ನೆಹರೂ ಕುಟುಂಬವು ಮೀಸಲಾತಿ ವಿರೋಧಿ ಪರಂಪರೆಯನ್ನು ಹೊಂದಿದೆ ಎಂದು ಆಪಾದಿಸಿದರು.
‘ಬಿಜೆಪಿ ದಲಿತ ವಿರೋಧಿ ಎನ್ನುವ ಕಾಂಗ್ರೆಸ್ಸಿನ ಸಚಿವರು ಈಗ ಯಾರು ದಲಿತ ವಿರೋಧಿ ಎಂಬ ಪ್ರಶ್ನೆಗೆ ಉತ್ತರ ಕೊಡಬೇಕಿದೆ’ ಎಂದು ಸವಾಲು ಹಾಕಿದರು.
‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ’ ಎಂದು ದೂರಿದರು.
ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಎಸ್.ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಗಿರೀಶ್ ಹಾಜರಿದ್ದರು.