ಮಂಗಳವಾರ, ಸೆಪ್ಟೆಂಬರ್ 29, 2020
28 °C
ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡ ಬಡಾವಣೆಗಳ ತೆರವು – ಪುಟ್ಟಸ್ವಾಮಿ

‘ಅನಧಿಕೃತ ಬಡಾವಣೆ: ಸರ್ಕಾರಕ್ಕೆ ಕೋಟ್ಯಂತರ ನಷ್ಟ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಡಾವಣೆ–ಸಾಂದರ್ಭಿಕ ಚಿತ್ರ

ಬೆಂಗಳೂರು: 'ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ವ್ಯಾಪ್ತಿಯಲ್ಲಿ 172 ಖಾಸಗಿ ಸಂಸ್ಥೆಯವರು 3,109 ಎಕರೆ 27 ಗುಂಟೆ ಜಮೀನಿನಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿದ್ದಾರೆ. ಇದರಿಂದ ಸರ್ಕಾರಕ್ಕೆ ತೆರಿಗೆ, ಭೂ ಪರಿವರ್ತನೆ ಶುಲ್ಕ ಸೇರಿ ₹ 500 ಕೋಟಿ ತೆರಿಗೆ ವಂಚನೆಯಾಗಿದೆ’ ಎಂದು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು ಬಿಡಿಎ ಮತ್ತು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ವ್ಯಾಪ್ತಿಯಲ್ಲಿನ ಅನಧಿಕೃತ ಬಡಾವಣೆ ಕುರಿತು ಮಾಹಿತಿ ನೀಡಿದರು.

‘ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಬಡಾವಣೆಗಳ ನಿವೇಶನಗಳಿಗೆ ನಕ್ಷೆ ಮಂಜೂರಾತಿ, ಪರವಾನಗಿ ನೀಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಸೂಚಿಸಿದ್ದಾರೆ’ ಎಂದು ಹೇಳಿದರು.

'ಬಿಎಂಆರ್‌ಡಿಎ ವ್ಯಾಪ್ತಿಯಲ್ಲಿ 800 ವೈಯಕ್ತಿಕ ಸಂಸ್ಥೆಗಳಿಂದ 5,488 ಎಕರೆ 1 ಗುಂಟೆ ಜಮೀನಿನಲ್ಲಿ ನಿರ್ಮಿಸಿರುವ ಅನಧಿಕೃತ ಬಡಾವಣೆಯಲ್ಲಿ ಭೂ ಪರಿವರ್ತನೆ, ಭೂ ಬದಲಾವಣೆ ಉಲ್ಲಂಘನೆಯಾಗಿದೆ. ಇದರಿಂದ ಸರ್ಕಾರಕ್ಕೆ ತೆರಿಗೆ ಮೊತ್ತ ₹ 185.67 ಕೋಟಿ ಸೇರಿ ಒಟ್ಟು ₹ 850 ಕೋಟಿಗೂ ಹೆಚ್ಚು ಹಣ ವಂಚನೆಯಾಗಿದೆ’ ಎಂದರು.

‘ಸಮಗ್ರ ಮಾಸ್ಟರ್ ಪ್ಲಾನ್‌ (ಸಿಡಿಪಿ) ನಕ್ಷೆಗೆ ವಿರುದ್ಧವಾಗಿ ಅನಧಿಕೃತ ಬಡಾವಣೆಗಳು ನಿರ್ಮಾಣವಾದರೆ ಸಿಡಿಪಿ ನಕ್ಷೆಯನ್ನು ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ. ಅಲ್ಲದೆ, ನಾಗರಿಕ ಸೌಲಭ್ಯಗಳನ್ನು ಒಳಗೊಂಡ ನಿವೇಶನಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ವಿತರಿಸಲು ಕೂಡಾ ಕಷ್ಟ’ ಎಂದರು.

‘ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತಕ್ಷಣ ನಿಲ್ಲಿಸಿ ನಿರ್ಮಾಣವಾಗಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತ ಬಡಾವಣೆಗಳಿಂದ ಬೊಕ್ಕಸಕ್ಕೆ ಬರಬೇಕಾದ ಕೋಟ್ಯಂತರ ಹಣ ವಸೂಲಿ ಮಾಡಬಹುದಾಗಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು