ಗುರುವಾರ , ಡಿಸೆಂಬರ್ 8, 2022
18 °C

ಗಡಿ ವಿವಾದ: ಸಲಹಾ ಸಮಿತಿ ರಚನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿರೋಧ ಪಕ್ಷಗಳ ನಾಯಕರನ್ನೂ ಸೇರಿಸಿಕೊಂಡು ತಕ್ಷಣವೇ ಸಲಹಾ ಸಮಿತಿ ರಚಿಸಬೇಕು’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯದ ವಕೀಲರ ತಂಡ ವನ್ನು ಸನ್ನದ್ಧಗೊಳಿಸಬೇಕು. ಗಡಿ ವ್ಯಾಜ್ಯದ ಮೇಲುಸ್ತುವಾರಿಯನ್ನು ಹಿರಿಯ ಸಚಿವರೊಬ್ಬರಿಗೆ ಒಪ್ಪಿಸಬೇಕು. ಅಲ್ಲದೆ, ನಿಷ್ಕ್ರಿಯಗೊಂಡಿರುವ ಗಡಿ ಸಂರಕ್ಷಣಾ ಸಮಿತಿಯನ್ನು ಪುನರ್‌ ರಚಿಸಬೇಕು’ ಎಂದು ಮುಖ್ಯಮಂತ್ರಿಯವರನ್ನು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯದ ಬಗ್ಗೆ ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಅತೀವ ಆಸಕ್ತಿ ತೋರುತ್ತಿರುವ ಹಿನ್ನೆಲೆ ಯಲ್ಲಿ ಇತ್ತೀಚೆಗೆ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ರಾಜ್ಯದ ಕಾರ್ಯತಂತ್ರವನ್ನು ರೂಪಿಸಬೇಕು ಎಂದೂ ಸಿಎಂಗೆ ಸಲಹೆ ನೀಡಿದ್ದರು.

‘ಕೇಂದ್ರ ಸರ್ಕಾರ ನೇಮಿಸಿರುವ ಮಹಾಜನ ಆಯೋಗದ ವರದಿಯೇ ಅಂತಿಮ ಎನ್ನುವುದು ಈವರೆಗಿನ ಎಲ್ಲ ರಾಜ್ಯ ಸರ್ಕಾರಗಳ ನಿಲುವು. ಗಡಿ ವಿವಾದವನ್ನು ತೀರ್ಮಾನಿಸಬೇಕಾಗಿರುವುದು ಕೇಂದ್ರ ಸರ್ಕಾರವೇ ಹೊರತು, ನ್ಯಾಯಾಲಯ ಅಲ್ಲ ಎನ್ನುವುದು ಕರ್ನಾಟಕ ಸರ್ಕಾರದ ನಿಲುವು. ಕರ್ನಾಟಕಕ್ಕೆ ಸೇರಿರುವ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟಿನ ಮೊರೆ ಹೋದ ದಿನದಿಂದ ಇದು ನಮ್ಮ ನಿಲುವಾಗಿದೆ. ನೆಲ-ಜಲ-ಭಾಷೆಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ನ್ಯಾಯಬದ್ಧವಾದ ಎಲ್ಲ ಕ್ರಮಗಳನ್ನು ಕಾಂಗ್ರೆಸ್‌ ಬೆಂಬಲಿಸಲಿದೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು