ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ನಿರ್ಣಯ ಆಯೋಗ: ಆಕ್ಷೇಪಣೆಗೆ ಕಾಲಾವಕಾಶ

Last Updated 18 ಜನವರಿ 2022, 16:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021ರ ಜಾರಿಗೆ ಸೆಪ್ಟೆಂಬರ್ 18ರಂದು ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು,ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ’ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಇವುಗಳಿಗೆ ಚುನಾವಣೆ ನಡೆಸಲು ಆಯೋಗವು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಇದರಿಂದ, ಆಯೋಗ ಇಷ್ಟು ದಿನ ನಡೆಸಿರುವ ಎಲ್ಲ ಸಿದ್ಧತೆಗಳೂ ವ್ಯರ್ಥವಾಗಲಿವೆ‘ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ನ್ಯಾಯಪೀಠ, ’ಸರ್ಕಾರ ಮೊದಲು ಆಕ್ಷೇಪಣೆ ಸಲ್ಲಿಸಲಿ‘ ಎಂದು ತಿಳಿಸಿ, ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT