ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ?

ಬದಲಾದ ಬಿಎಸ್‌ವೈ ಹೇಳಿಕೆ
Last Updated 20 ನವೆಂಬರ್ 2020, 20:42 IST
ಅಕ್ಷರ ಗಾತ್ರ

ಬೆಂಗಳೂರು: ‘ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಅನುಮತಿಗಾಗಿ ಕಾಯುತ್ತಿದ್ದೇನೆ’ ಎಂದು ಗುರುವಾರವಷ್ಟೇ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಇನ್ನು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಶುಕ್ರವಾರ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಯವರ ಪೊಲೀಸ್‌ ಪದಕ ಪ್ರದಾನ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಚರ್ಚಿಸಿ ಬಂದಿದ್ದೇನೆ. ಮೂರು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಹೊಸದಾಗಿ ಯಾರು ಸಚಿವರಾಗುತ್ತಾರೆ ಎನ್ನುವುದೂ ತಿಳಿಯುತ್ತದೆ’ ಎಂದರು.

‘ದೆಹಲಿಯಿಂದ ಪಟ್ಟಿ ಬರಬೇಕು. ಆ ಬಳಿಕವೇ ಮುಂದಿನ ಪ್ರಕ್ರಿಯೆ ಆರಂಭಿಸಲು ಸಾಧ್ಯ. 2–3 ದಿನಗಳಲ್ಲಿ ವರಿಷ್ಠರಿಂದ ಅನುಮೋದನೆಗೊಂಡು ಪಟ್ಟಿ ಬರುವ ಸಾಧ್ಯತೆ ಇದೆ’ ಎಂದೂ ಯಡಿಯೂರಪ್ಪ ಹೇಳಿದ್ದರು.

ಸಚಿವ ಸ್ಥಾನ ಪಡೆಯಲು ಒತ್ತಡ ಹೇರುವುದಕ್ಕಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಎಲ್ಲ ಶಾಸಕರೂ ಸಭೆ ನಡೆಸುತ್ತಾರೆ’ ಎಂದರು.

ಆದರೆ, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಯಾವುದೇ ಸಿದ್ಧತೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಪಕ್ಷದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಶಾಸಕರು ಪ್ರತ್ಯೇಕ ಸಭೆಗಳನ್ನು ನಡೆಸಬಾರದು ಎಂದು ತಾಕೀತು ಮಾಡಿದ ಕಾರಣ ಸಭೆಯನ್ನು ರದ್ದುಪಡಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ನಿರ್ಣಯ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು ಸಮರ್ಥರಿದ್ದಾರೆ ಎಂದರು.

‘ವೈಯಕ್ತಿಕ ಆಕಾಂಕ್ಷೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸಲು ಶಾಸಕರಿಗೆ ಪಕ್ಷದ ವೇದಿಕೆಯಲ್ಲಿ ಸದಾ ಅವಕಾಶವಿರುತ್ತದೆ. ಆದರೆ ಪಕ್ಷಕ್ಕೆ ಮುಜುಗರ ತರುವಂತಹ ಯಾವುದೇ ನಡವಳಿಕೆ, ಗುಂಪುಗಾರಿಕೆ ಮತ್ತು ಭಿನ್ನಾಭಿಪ್ರಾಯವನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ’ ಎಂದು ರವಿ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT