ಸೋಮವಾರ, ಸೆಪ್ಟೆಂಬರ್ 27, 2021
28 °C

ಆ.25ಕ್ಕೆ ಬಿಎಸ್‌ಪಿ ಪ್ರತಿಭಟನಾ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯಡಿ (ಟಿಎಸ್‌ಪಿ) ಬಿಬಿಎಂಪಿ ಈವರೆಗೆ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಇದನ್ನು ಖಂಡಿಸಿ ಇದೇ 25ರಂದು ಬೆಳಿಗ್ಗೆ 10 ಗಂಟೆಗೆ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯ ಸಂಚಾಲಕ ಮಾರಸಂದ್ರ ಮುನಿಯಪ್ಪ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013ನೇ ಸಾಲಿನಲ್ಲಿ ಎಸ್‌ಸಿಪಿ–ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 1,100 ಫಲಾನುಭವಿಗಳು ನಿವೇಶನ ಪಡೆಯಲು ಆಯ್ಕೆಯಾಗಿದ್ದರು.  ಸಮುದಾಯಗಳ ಮೇಲೆ ಪ್ರಭಾವಿಗಳ ನಿರ್ಲಕ್ಷ್ಯದಿಂದ ಇಷ್ಟು ವರ್ಷ ಕಳೆದರೂ ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಿಲ್ಲ’ ಎಂದು ಆರೋಪಿಸಿದರು.

‘ಸಮುದಾಯಗಳನ್ನು ತುಳಿಯುವ ಯತ್ನ ನಿರಂತರವಾಗಿ ನಡೆಯುತ್ತಿದೆ. ನಿವೇಶನ ಹಂಚಿಕೆಗೆ ಅಡ್ಡಿಪಡಿಸುವ ಮೂಲಕ ವಸತಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ವಿರೋಧಿ ನಡೆ ಪ್ರದರ್ಶಿಸಿದ್ದಾರೆ. ಮುಂದಿನ ಹಂತದಲ್ಲಿ ಇವರ ನಿವಾಸಗಳ ಎದುರೂ ಧರಣಿ ನಡೆಸಲಾಗುವುದು’ ಎಂದರು.  

ಬಹುಜನ ವಿಮೋಚನಾ ಚಳವಳಿ ಸಂಚಾಲಕ ಎಸ್.ಗಂಗಾಧರ್,‘ಪ್ರಸ್ತುತ ಈ ಮೂಲ ಯೋಜನೆಯನ್ನೇ ಬದಲಿಸುವ ಹುನ್ನಾರ ನಡೆದಿದೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗಾಗಿ ರೂಪಿಸಲಾಗಿರುವ ಯೋಜನೆಗಳು ಅನುಷ್ಠಾನಗೊಳ್ಳುತ್ತಿಲ್ಲ. ನಿವೇಶನಕ್ಕಾಗಿ ಫಲಾನುಭವಿಗಳು ಪರದಾಡಬೇಕಾಗಿದೆ’ ಎಂದರು.

‘ಫಲಾನುಭವಿಗಳಿಗೆ ಕೂಡಲೇ ನಿವೇಶನಗಳನ್ನು ಹಂಚಿಕೆ ಮಾಡಿ, ಹಕ್ಕು ಪತ್ರಗಳನ್ನು ವಿತರಿಸಬೇಕು. ನಿಗದಿತ ಪ್ರದೇಶದಲ್ಲಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಬೇಕು. ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು