ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಪಿ ಮುಖಂಡ ಕೊಲೆ; ಠಾಣೆ ಎದುರು ಪ್ರತಿಭಟನೆ

Last Updated 10 ಜನವರಿ 2021, 20:23 IST
ಅಕ್ಷರ ಗಾತ್ರ

ಬೆಂಗಳೂರು: ‘ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ತ್ವರಿತವಾಗಿ ಬಂಧಿಸಬೇಕು’ ಎಂದು ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

ರಾಜಗೋಪಾಲನಗರ ಠಾಣೆ ಎದುರು ಸೇರಿದ್ದ ಕಾರ್ಯಕರ್ತರು, ‘ಹಗಲಿನಲ್ಲೇ ರೌಡಿಗಳು ಶ್ರೀನಿವಾಸ್ ಅವರನ್ನು ಕೊಲೆ ಮಾಡಿದ್ದಾರೆ. ಇದರ ಹಿಂದೆ ಹಲವರ ಕೈವಾಡವಿದ್ದು, ತನಿಖೆ ಮೂಲಕ ಸತ್ಯವನ್ನು ಬಯಲಿಗೆ ಎಳೆಯಬೇಕು’ ಎಂದು ದೂರಿದರು.

‘ಬಹುಜನ ಕ್ರಾಂತಿದಳ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದ ಶ್ರೀನಿವಾಸ್, ಸ್ಥಳೀಯವಾಗಿ ಹೆಸರು ಮಾಡಿದ್ದರು. ಬಿಎಸ್‌ಪಿ ಸೇರಿದ ನಂತರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಆಗಿಯೂ ಕೆಲಸ ಮಾಡುತ್ತಿದ್ದರು. ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು’ ಎಂದು ಪ್ರತಿಭಟನಕಾರರು ಹೇಳಿದರು.

‘ಶ್ರೀನಿವಾಸ್ ಅವರ ಕಚೇರಿ ಮೇಲೂ ಈ ಹಿಂದೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ಈ ಬಗ್ಗೆಯೂ ಪ್ರಕರಣ ದಾಖಲಾಗಿತ್ತು. ಇದರ ನಡುವೆಯೇ ಶ್ರೀನಿವಾಸ್ ಅವರನ್ನು ಕೊಲೆ ಮಾಡಲಾಗಿದ್ದು, ಇದರ ಹಿಂದೆ ಹಲವು ಅನುಮಾನಗಳಿವೆ’ ಎಂದೂ ತಿಳಿಸಿದರು.

‘ಶ್ರೀನಿವಾಸ್ ಅವರು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರಲಿಲ್ಲ. ಅವರನ್ನು ರೌಡಿ ಎಂದು ಬಿಂಬಿಸುವ ಮೂಲಕ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದೂ ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, ‘ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕಾರ್ಯಕರ್ತರು ಹಿಂಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT