ಮಂಗಳವಾರ, ಮೇ 18, 2021
24 °C
ಭೌತ–ರಸಾಯನ ವಿಜ್ಞಾನ ಪರೀಕ್ಷೆ ಸುಗಮ

ಸಿಇಟಿ ಸುಖಾಂತ್ಯ: ಶೇ 90ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಎರಡನೇ ದಿನವೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಗಮವಾಗಿ ನಡೆಯಿತು. ಒಟ್ಟು 1.94 ಲಕ್ಷ ಅಭ್ಯರ್ಥಿಗಳ ಪೈಕಿ, ಶುಕ್ರವಾರ 1.75 ಲಕ್ಷ ಅಭ್ಯರ್ಥಿಗಳು ಭೌತವಿಜ್ಞಾನ ಮತ್ತು ರಸಾಯನವಿಜ್ಞಾನ ಪರೀಕ್ಷೆ ಬರೆದರು. 

ಭೌತವಿಜ್ಞಾನ ಪತ್ರಿಕೆಯನ್ನು 1,75,428 (ಶೇ 90.23) ಅಭ್ಯರ್ಥಿಗಳು ಬರೆದರೆ, ರಸಾಯನವಿಜ್ಞಾನ ಪತ್ರಿಕೆಗೆ 1,75,337 (ಶೇ 90.9) ಅಭ್ಯರ್ಥಿಗಳು ಹಾಜರಾಗಿದ್ದರು. ಕೋವಿಡ್‌–19 ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷೆ ಸುಗಮವಾಗಿ ಮುಕ್ತಾಯವಾಯಿತು. 

ಕೋವಿಡ್‌–19 ದೃಢಪಟ್ಟಿದ್ದ 63 ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಎಲ್ಲ 63 ಅಭ್ಯರ್ಥಿಗಳು ಎರಡೂ ಪತ್ರಿಕೆಯನ್ನು ಬರೆದರು. ಈ ಅಭ್ಯರ್ಥಿಗಳಿಗಾಗಿಯೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.

ಬಗೆಹರಿದ ಗೊಂದಲ: ಕೋವಿಡ್‌–19 ಇದ್ದುದರಿಂದ ಕೆಲವು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಮನವಿ ಸಲ್ಲಿಸಿದ್ದರು. ಆದರೆ, ಪರಿಷ್ಕೃತ ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳದೆ ಹಳೆಯ ಕೇಂದ್ರಗಳಿಗೇ ತೆರಳಿದ್ದರಿಂದ ಗೊಂದಲ ಉಂಟಾಯಿತು. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕಾರಿಗಳು ಅಭ್ಯರ್ಥಿಗಳು ತೆರಳಿದ್ದ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದರು. 

ಕ್ವಾರಂಟೈನ್‌ ವಲಯದಿಂದ ನಗರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಕೂಡ ಪರೀಕ್ಷೆಗೆ ಬರೆಯಲು ಅವಕಾಶ ಸಿಗುವುದೋ ಇಲ್ಲವೋ ಎಂಬ ಗೊಂದಲದಲ್ಲಿದ್ದರು. ಆದರೆ, ಈ ಅಭ್ಯರ್ಥಿಗಳಿಗೆ ಸೋಂಕು ತಗುಲಿರಲಿಲ್ಲ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಈ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು. 

ಪರೀಕ್ಷಾ ಸ್ಥಳ, ಕೇಂದ್ರದ ಬದಲಾವಣೆಗೆ ಸಂಬಂಧಿಸಿದಂತೆ ಸುಮಾರು 200ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಇಎ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡರು. ಸಕಾಲಕ್ಕೆ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ವ್ಯವಸ್ಥೆ ಮಾಡಲಾಯಿತು. 

ಕನ್ನಡ ಪರೀಕ್ಷೆ ಇಂದು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಶನಿವಾರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರಿನ ಕೇಂದ್ರದಲ್ಲಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ. ಒಟ್ಟು 1,881 ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು