ಶುಕ್ರವಾರ, ಫೆಬ್ರವರಿ 21, 2020
18 °C
* ಕೃಷಿ ಮಾರಾಟ ಮಂಡಳಿಗೆ ₹ 48 ಕೋಟಿ ವಂಚನೆ ಪ್ರಕರಣ * ಚೆನ್ನೈಗೆ ಸಿಸಿಬಿ ತಂಡ

ಸಿಂಡಿಕೇಟ್ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಕೃಷಿ ಮಾರಾಟ ಮಂಡಳಿಯ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿರುವ ಆರೋಪದಡಿ ಸಿಂಡಿಕೇಟ್ ಬ್ಯಾಂಕ್‌ನ ಉತ್ತರಹಳ್ಳಿ ಶಾಖೆಯ ಸಹಾಯಕ ವ್ಯವಸ್ಥಾಪಕ ಜಯರಾಮ್ ಹಾಗೂ ಮಂಡಳಿಯ ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ (ಡಿಜಿಎಂ) ಸಿದ್ದಗಂಗಯ್ಯ ಸೇರಿ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಂಡಳಿಯ ₹48 ಕೋಟಿಯನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ನಂಬಿಕೆದ್ರೋಹ ಎಸಗಲಾಗಿದೆ’ ಎಂದು ಆರೋಪಿಸಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕರಿಗೌಡ ಇತ್ತೀಚೆಗೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಗಂಭೀರತೆ ಅರಿತ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತನಿಖೆ ಹೊಣೆಯನ್ನು ಸಿಸಿಬಿಗೆ ವಹಿಸಿದ್ದರು. ಚುರುಕಿನ ತನಿಖೆ ಕೈಗೊಂಡಿರುವ ಪೊಲೀಸರು, ಇದುವರೆಗೂ ಆರು ಮಂದಿಯನ್ನು ಬಂಧಿಸಿದ್ದಾರೆ. ಮಂಡಳಿಯ ಕೆಲ ನೌಕರರು ಕೃತ್ಯದಲ್ಲಿ ಶಾಮೀಲಾಗಿರುವ ಅನುಮಾನವಿದ್ದು, ಅವರೆಲ್ಲ ತಲೆಮರೆಸಿಕೊಂಡಿದ್ದಾರೆ.

‘ಜಯರಾಮ್ ಹಾಗೂ ಸಿದ್ದಗಂಗಯ್ಯ ಒಳಸಂಚು ನಡೆಸಿ ಕೃತ್ಯ ಎಸಗಿದ್ದು ಇದುವರೆಗಿನ ತನಿಖೆಯಿಂದ ಗೊತ್ತಾಗಿದ್ದು, ಅವರನ್ನು ಬಂಧಿಸಿ ಹೇಳಿಕೆ ಪಡೆಯಲಾಗಿದೆ. ಕೃತ್ಯಕ್ಕೆ ಸಹಕರಿಸಿದ್ದ ಭರತ್, ಮುಸ್ತಫಾ, ಮಹಮ್ಮದ್ ಅಸ್ಲಾಂ ಹಾಗೂ ರೇವಣ್ಣ ಎಂಬುವರನ್ನು ಸೆರೆಹಿಡಿಯಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ಚೆನ್ನೈನಲ್ಲಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ; ‘ಚೆನ್ನೈನಲ್ಲಿರುವ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವುದಕ್ಕೆ ಪುರಾವೆಗಳು ಸಿಕ್ಕಿವೆ. ಖಾತೆ ಹೊಂದಿರುವ ವ್ಯಕ್ತಿಗಳನ್ನು ಹಾಗೂ ಬ್ಯಾಂಕ್ ಅಧಿಕಾರಿಗಳನ್ನು ವಿಚಾರಣೆ ಒಳಪಡಿಸಬೇಕಿದೆ. ಸಿಸಿಬಿ ತಂಡ ಚೆನ್ನೈಗೆ ಹೋಗಿದೆ’ ಎಂದು ಮೂಲಗಳು ತಿಳಿಸಿವೆ.

‘ರಾಜ್ಯ ಕೃಷಿ ಮಾರಾಟ ಮಂಡಳಿ ಆವರ್ತನಿಧಿ ಇರುವ ಆಂಧ್ರ ಬ್ಯಾಂಕ್‌ನ ರಾಜಾಜಿನಗರ ಶಾಖೆಯಿಂದ ಆರ್‌ಟಿಜಿಎಸ್ ಮೂಲಕ ₹100 ಕೋಟಿ ಹಣವನ್ನು ಸಿಂಡಿಕೇಟ್ ಬ್ಯಾಂಕ್‌ ಉತ್ತರಹಳ್ಳಿ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ತಲಾ ₹50 ಕೋಟಿಯಂತೆ ಎರಡು ನಿಶ್ಚಿತ ಠೇವಣಿಗಳನ್ನು ಇಡಲಾಗಿತ್ತು. ಒಂದು ಠೇವಣಿಯ ಹಣವನ್ನೇ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಆರೋಪಿಗಳು ವಂಚಿಸಿದ್ದಾರೆ’ ಎಂದು ಮೂಲಗಳು ಹೇಳಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು