ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಷ್ಕ್ರಿಯ ಕೋರಿದ ಅರ್ಜಿ: ಕರಡು ಅಧಿಸೂಚನೆ ಪ್ರಕಟ

Last Updated 10 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಿಳಾ ಪ್ರಯಾಣಿಕರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಕಾರಣ ಕ್ಯಾಬ್‌ಗಳಲ್ಲಿನ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ದಿಸೆಯಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ‘ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ’ (ಬಿಎಸ್‌ಒಜಿ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಲಕ್ಷ್ಮೀ ಅಯ್ಯಂಗಾರ್, ‘ನಗರದ ಕ್ಯಾಬ್‌ಗಳಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ. ಬಹುತೇಕ ಪ್ರಕರಣಗಳಲ್ಲಿ ಚಾಲಕರು ಚೈಲ್ಡ್ ಲಾಕ್ ವ್ಯವಸ್ಥೆ ದುರುಪಯೋಗ ಮಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ಹೀಗಾಗಿ ಇದನ್ನು ತೆಗೆದುಹಾಕಲು ನಿಯಮದಲ್ಲಿ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿದರು.

ಇದಕ್ಕೆ ಸರ್ಕಾರದ ಪರ ವಕೀಲರು, ‘ಚೈಲ್ಡ್ ಸೇಫ್ಟಿ ಲಾಕ್ ನಿಷ್ಕ್ರಿಯಗೊಳಿಸುವ ಕುರಿತು ಕರ್ನಾಟಕ ಮೋಟಾರು ವಾಹನಗಳ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಈ ದಿಸೆಯಲ್ಲಿ ಇದೇ 9ರಂದು ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಕರಡು ಅಧಿಸೂಚನೆಯಲ್ಲಿ ಏನಿದೆ ?
ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ–1988ರ ಕಲಂ 2 (25)ರಲ್ಲಿ ವ್ಯಾಖ್ಯಾನಿಸಿರುವ ಸಾರಿಗೆ ವಾಹನ ವರ್ಗದ ಮೋಟಾರ್ ಕ್ಯಾಬ್ಸ್ (ಟ್ಯಾಕ್ಸಿ) ವಾಹನಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸಬೇಕು. ತಪ್ಪಿದರೆ, ಅಂತಹ ವಾಹನಗಳ ರಹದಾರಿ ನೀಡುವ ಅಥವಾ ನವೀಕರಿಸುವ ಮತ್ತು ಅರ್ಹತಾ ಪತ್ರ ನೀಡುವ ಇಲ್ಲವೇ ನವೀಕರಣ ಮಂಜೂರು ಮಾಡುವಂತಿಲ್ಲ. ಈ ಬಗ್ಗೆ ಸಂಬಂಧಿಸಿದವರು ಆಕ್ಷೇಪಣೆಗಳನ್ನು ಸಲ್ಲಿಸಲು 30 ದಿನ ಕಾಲಾವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT