ಶನಿವಾರ, ಮಾರ್ಚ್ 25, 2023
28 °C

ಕೋವಿಡ್‌ 3ನೇ ಅಲೆ ಎದುರಿಸಲು ಸರ್ಕಾರ ಸರ್ವ ಸನ್ನದ್ಧವಾಗಿದೆ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೋವಿಡ್‌ ಮೂರನೇ ಅಲೆ ಎದುರಿಸಲು ಸರ್ಕಾರ ಸರ್ವ ಸನ್ನದ್ಧವಾಗಿದೆ. ವೈದ್ಯಕೀಯ ಮೂಲ ಸೌಕರ್ಯ ಸುಧಾರಣೆಗೂ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿ.ಕೆ.ರಾಮಮೂರ್ತಿ ನೇತೃತ್ವದಲ್ಲಿ ಜಯನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್‌ ವಿತರಣೆ ಹಾಗೂ ಕೋವಿಡ್‌ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು.

‘ಕೋವಿಡ್‌ ಸಾಂಕ್ರಾಮಿಕ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೈದ್ಯಕೀಯ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ಲಸಿಕಾ ಅಭಿಯಾನ ಭರದಿಂದ ಸಾಗುತ್ತಿದ್ದು, ನಿತ್ಯ 3 ಲಕ್ಷದಿಂದ 4 ಲಕ್ಷ ಮಂದಿಗೆ ಲಸಿಕೆ ನೀಡಲಾಗುತ್ತಿದೆ. ಇನ್ನೂ ಹೆಚ್ಚು ಮಂದಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

‘ಕೋವಿಡ್‌ನಿಂದ ಹಲವು ಸಂಕಷ್ಟಗಳು ಸೃಷ್ಟಿಯಾಗಿವೆ. ಆರ್ಥಿಕವಾಗಿ ಹಿಂದುಳಿದವರಿಗೆ ತುಂಬಾ ತೊಂದರೆಯಾಗಿದೆ. ಇದನ್ನು ಮನಗಂಡು ನಮ್ಮ ಸರ್ಕಾರವು ₹2,050 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್‌ ಪ್ರಕಟಿಸಿದೆ. ತರಕಾರಿ ಹಾಗೂ ಹೂ ಬೆಳೆಗಾರರ ಆದಿಯಾಗಿ ಎಲ್ಲ ರೈತರು, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್‌ ಚಾಲಕರು, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಒದಗಿಸಲಾಗಿದೆ. ಈಗಾಗಲೇ ನೇರವಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಕೋವಿಡ್‌ ಮೊದಲ ಅಲೆಯ ವೇಳೆಯೂ ಸಾವಿರಾರು ಮಂದಿಗೆ ದಿನಸಿ ಕಿಟ್‌ ಹಂಚಿದ್ದ ಸಿ.ಕೆ.ರಾಮಮೂರ್ತಿ ಅವರು ಈ ಸಲವೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಮೂಲಕ ಮಾದರಿಯಾಗಿದ್ದಾರೆ’ ಎಂದರು.

‘ಕೋವಿಡ್‌ ನಿಯಂತ್ರಣಕ್ಕಾಗಿ ವೈದ್ಯರು, ಶುಶ್ರೂಷಕಿಯರು, ಪೊಲೀಸರು ಹಾಗೂ ಪೌರ ಕಾರ್ಮಿಕರು ಪ್ರಾಣ ಪಣಕ್ಕಿಟ್ಟು ದುಡಿಯುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿನಯ್‌ ಗುರೂಜಿ, ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇಳಿ ವಯಸ್ಸಿನಲ್ಲೂ ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೋವಿಡ್‌ ಬಿಕ್ಕಟ್ಟಿನ ಸಮಯದಲ್ಲಿ ಸಚಿವರು ಹಾಗೂ ಪಾಲಿಕೆಯ ಮಾಜಿ ಸದಸ್ಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸರ್ಕಾರವನ್ನು ದೂರುತ್ತಾ ಕೂರುವ ಬದಲು ಜನರು ಹೊಣೆಯರಿತು ಪರಿವರ್ತನೆಗೆ ನೆರವಾಗಬೇಕು. ಕೋವಿಡ್‌ನಿಂದಾಗಿ ತಂದೆ ತಾಯಿಯನ್ನು ಕಳೆದುಕೊಂಡು ಅನಾಥವಾಗಿರುವ ಮಕ್ಕಳಿಗಾಗಿ ಐ.ಟಿ ಉದ್ಯೋಗಿಗಳು ಕನಿಷ್ಠ ₹5 ಸಾವಿರ ನೀಡಿದರೆ ಅನುಕೂಲ. ಪಿತೃಶಾಪ ನಿವಾರಣೆಗಾಗಿ ನಾವು ಗೋಕರ್ಣಕ್ಕೆ ಹೋಗಿ ಪೂಜೆ ಮಾಡಿಸುತ್ತೇವೆ. ಆ ಹಣವನ್ನು ಅನಾಥ ಮಕ್ಕಳಿಗೆ ಮೀಸಲಿಟ್ಟರೆ ಕರ್ನಾಟಕವು ನಿಜವಾದ ಧರ್ಮಸ್ಥಳವಾಗಲಿದೆ’ ಎಂದು ತಿಳಿಸಿದರು.

ಸಚಿವ ಆರ್‌.ಅಶೋಕ, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಆರ್‌.ರಮೇಶ್‌, ಪಾಲಿಕೆ ಮಾಜಿ ಸದಸ್ಯೆ ನಾಗರತ್ನ ರಾಮಮೂರ್ತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು