ಬುಧವಾರ, ಡಿಸೆಂಬರ್ 8, 2021
27 °C
ಕೇಂದ್ರದಿಂದ ಹೆಚ್ಚಿನ ಮೊತ್ತದ ನೆರವು ಕೋರಿದ ಸಿ.ಎಂ

ಪ್ರವಾಹದಿಂದ ₹ 8,071 ಕೋಟಿ ನಷ್ಟ, ಗರಿಷ್ಠ ಪರಿಹಾರ ಅಗತ್ಯ: ಕೇಂದ್ರಕ್ಕೆ ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಈ ವರ್ಷ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ₹ 8,071 ಕೋಟಿ ನಷ್ಟ ಉಂಟಾಗಿದ್ದು, ಗರಿಷ್ಠ ಮೊತ್ತದ ಪರಿಹಾರ ನೀಡಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರವಾಹ ಮತ್ತು ಅತಿವೃಷ್ಟಿಯಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಬಂದಿರುವ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್‌ ನೇತೃತ್ವದ ಅಧ್ಯಯನ ತಂಡದ ಜೊತೆಗೆ  ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ ಸಭೆ ನಡೆಸಿದ ಮುಖ್ಯಮಂತ್ರಿ, ಹಾನಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯುಳ್ಳ ದಾಖಲೆ ಸಲ್ಲಿಸಿದರು.

ಪ್ರಸಕ್ತ ವರ್ಷ ಪ್ರವಾಹದಿಂದ 4.03 ಲಕ್ಷ ಹೆಕ್ಟೇರ್‌ ವಿಸ್ತೀರ್ಣದಲ್ಲಿ ಬೆಳೆ ಹಾನಿಯಾಗಿದೆ. ರಸ್ತೆ, ಸೇತುವೆ, ವಿದ್ಯುತ್‌ ಪರಿ
ವರ್ತಕಗಳು, ಶಾಲೆ, ಅಂಗನವಾಡಿ ಮತ್ತು ಸರ್ಕಾರಿ ಕಟ್ಟಡಗಳಿಗೂ ಹಾನಿಯಾಗಿದೆ. ₹ 8,071 ಕೋಟಿಯಷ್ಟು ನಷ್ಟ ಉಂಟಾಗಿ
ರುವ ಅಂದಾಜು ಇದೆ ಎಂದು ಯಡಿಯೂರಪ್ಪ ಕೇಂದ್ರ ತಂಡಕ್ಕೆ ವಿವರಿಸಿದರು.

ಪ್ರವಾಹ, ಭೂಕುಸಿತ ಮತ್ತು ಅತಿವೃಷ್ಟಿಯಿಂದ ಸಂಪೂರ್ಣ ಹಾನಿಗೀಡಾದ ಮನೆಗಳಿಗೆ ತಲಾ ₹ 5 ಲಕ್ಷ, ತೀವ್ರ ಹಾನಿಗೀಡಾದ ಮನೆಗಳಿಗೆ ತಲಾ ₹ 3 ಲಕ್ಷ ಮತ್ತು ಭಾಗಶಃ ಹಾನಿಗೀಡಾದ ಮನೆಗಳಿಗೆ ತಲಾ ₹ 50 ಸಾವಿರ ಪರಿಹಾರ ನೀಡಲಾಗುತ್ತಿದೆ. ಕಳೆದ ವರ್ಷ ಈ ಉದ್ದೇಶಕ್ಕೆ ₹ 1,500 ಕೋಟಿ ಒದಗಿಸಲಾಗಿದೆ. ಈ ವರ್ಷ ಕೋವಿಡ್‌ ಸಂಕಷ್ಟದ ನಡುವೆಯೂ ₹ 200 ಕೋಟಿ ನೀಡಲಾಗುವುದು ಎಂದರು.

‘ಕೋವಿಡ್‌ನಿಂದಾಗಿ ವಿಕೋಪ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ಪಡೆಯಲು ಈವರೆಗೆ ಸಾಧ್ಯವಾಗಿಲ್ಲ. ಕೋವಿಡ್‌ ನಿಯಂತ್ರಣಕ್ಕಾಗಿ ₹ 460 ಕೋಟಿ ವೆಚ್ಚ ಮಾಡಲಾಗಿದೆ. ಕೋವಿಡ್‌ ನಿಯಂತ್ರಣ ಮತ್ತು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಹೆಚ್ಚಿನ ನೆರವು ಒದಗಿಸಬೇಕು’ ಎಂದು ಮನವಿ ಮಾಡಿದರು.

ಕೇಂದ್ರ ಆರ್ಥಿಕ ಇಲಾಖೆಯ ನಿರ್ದೇಶಕ ಡಾ.ಭರತೇಂದು ಕುಮಾರ್ ಸಿಂಗ್,ಕೃಷಿ ಮತ್ತು ರೈತರ ಸಹಕಾರ ಸಚಿವಾಲ
ಯದ ನಿರ್ದೇಶಕ ಡಾ.ಮನೋಹರನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಸದಾನಂದ ಬಾಬು, ಕೇಂದ್ರ ಜಲಶಕ್ತಿ ಸಚಿವಾಲಯದ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಗುರುಪ್ರಸಾದ್ ಜೆ. ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ.ರಾಜ್ ವೇದಿ ಕೇಂದ್ರ ಅಧ್ಯಯನ ತಂಡದ ಸದಸ್ಯರಾಗಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ‍ಪ್ರಮುಖ ಸಚಿವರು, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು