ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತಿಗಳಿಗೆ ಬೆದರಿಕೆ: ಸಿದ್ದರಾಮಯ್ಯ ಉನ್ನತ ಮಟ್ಟದ ತನಿಖೆಯ ಭರವಸೆ

Published 23 ಆಗಸ್ಟ್ 2023, 21:42 IST
Last Updated 23 ಆಗಸ್ಟ್ 2023, 21:42 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಗತಿಪರ ವಿಚಾರಧಾರೆ ಹೊಂದಿರುವ ರಾಜ್ಯದ ಹಲವು ಸಾಹಿತಿಗಳಿಗೆ ಬೆದರಿಕೆ ಕರೆ ಮತ್ತು ಪತ್ರಗಳು ಬರುತ್ತಿರುವ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳ ಜತೆ ಬುಧವಾರ ಸಭೆ ನಡೆಸಿದ ಅವರು, ‘ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ಅತ್ಯುತ್ತಮ ಪೊಲೀಸ್‌ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗುವುದು. ಸಾಹಿತಿಗಳು ಮತ್ತು ಹೋರಾಟಗಾರರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಸಾಹಿತಿ ಕೆ. ಮರುಳಸಿದ್ದಪ್ಪ ಮಾತನಾಡಿ, ‘ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಮತ್ತು ಹೋರಾಟಗಾರರು ಭಯ, ಆತಂಕ ಮತ್ತು ಮುಜುಗರದಿಂದ ಜೀವನ ನಡೆಸುವಂತಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಉನ್ನತ ಮಟ್ಟದ ತನಿಖೆ ನಡೆಸಿ ಬೆದರಿಕೆ ಹಾಕುತ್ತಿರುವವರನ್ನು ಪತ್ತೆಹಚ್ಚಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು’ ಎಂದು ಮನವಿ ಮಾಡಿದರು.

ಡಾ. ವಸುಂಧರಾ ಭೂಪತಿ ಮಾತನಾಡಿ, ‘ಈವರೆಗೆ ಸುಮಾರು 15 ಬೆದರಿಕೆ ಪತ್ರಗಳು ಬಂದಿವೆ. ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕವೂ ಮೂರು ಪತ್ರಗಳು ಬಂದಿವೆ. ಎಲ್ಲ ಪತ್ರಗಳಲ್ಲೂ ಒಂದೇ ರೀತಿಯ ಒಕ್ಕಣೆಗಳಿವೆ’ ಎಂದರು.

ಎಸ್‌.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಿಜಯಮ್ಮ, ದಿನೇಶ್‌ ಅಮೀನ್‌ ಮಟ್ಟು, ರುದ್ರಪ್ಪ ಹನಗವಾಡಿ, ಎಲ್‌.ಎನ್‌. ಮುಕುಂದರಾಜ್‌ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT