ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗೇಂದ್ರ ರಾಜೀನಾಮೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ: ಸಚಿವರಿಂದ ಅಭಿಪ್ರಾಯ

Published 31 ಮೇ 2024, 15:32 IST
Last Updated 31 ಮೇ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಕುರಿತು ಕೆಲವು ಸಚಿವರ ಜತೆ ಶುಕ್ರವಾರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಹೆಜ್ಜೆ ಬಗ್ಗೆ ಸಮಾಲೋಚಿಸಿದ್ದಾರೆ. ರಾಜೀನಾಮೆ ಪಡೆಯುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟದ್ದು ಎಂಬ ಅಭಿಪ್ರಾಯ ಸಚಿವರಿಂದ ವ್ಯಕ್ತವಾಗಿದೆ.

ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಮತ್ತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮುಖ್ಯಮಂತ್ರಿಯವರನ್ನ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಕುರಿತು ಈ ಸಂದರ್ಭದಲ್ಲಿ ಸಮಾಲೋಚನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಗೃಹ ಸಚಿವರ ಅನುಪಸ್ಥಿತಿಯಲ್ಲಿ ಗುರುವಾರ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ್ದ ಸಿದ್ದರಾಮಯ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ಮಾಹಿತಿ ಪಡೆದಿದ್ದರು. ಸಚಿವರ ಜತೆ ಪ್ರಕರಣದ ವಿವರಗಳನ್ನು ಶುಕ್ರವಾರ ಹಂಚಿಕೊಂಡಿರುವ ಮುಖ್ಯಮಂತ್ರಿ, ವಿರೋಧ ಪಕ್ಷ ಬಿಜೆಪಿಯ ಪ್ರತಿಭಟನೆಯನ್ನು ಎದುರಿಸುವ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಕೆಲವು ಸಚಿವರು ಕಾದು ನೋಡುವ ತಂತ್ರ ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಇನ್ನು ಕೆಲವರು ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವುದು ತಮ್ಮ ವಿವೇಚನೆಗೆ ಬಿಟ್ಟ ವಿಚಾರ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗೃಹ ಸಚಿವರ ಭೇಟಿಯಾದ ದದ್ದಲ್‌: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಗೃಹ ಸಚಿವ ಪರಮೇಶ್ವರ ಅವರನ್ನು ಶುಕ್ರವಾರ ಬೆಳಿಗ್ಗೆ ಭೇಟಿಯಾದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ದದ್ದಲ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡರು.

ತಾವು ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆಯ ನೀತಿಸಂಹಿತೆ ಜಾರಿಯಾಯಿತು. ಆ ಬಳಿಕ ನಿಗಮದ ಕಚೇರಿಗೆ ಹೋಗಿಲ್ಲ. ಅಲ್ಲಿ ಏನು ನಡೆಯಿತು ಎಂಬ ವಿವರ ತಮಗೆ ತಿಳಿದಿಲ್ಲ ಎಂಬ ಮಾಹಿತಿಯನ್ನು ದದ್ದಲ್‌ ಗೃಹ ಸಚಿವರಿಗೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT