ಆಂಬುಲೆನ್ಸ್ ನಿಯಂತ್ರಣಾ ಕೇಂದ್ರದ ಟೆಂಡರ್ ರದ್ದು: ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಆಂಬುಲೆನ್ಸ್ ನಿಯಂತ್ರಣಾ ಕೇಂದ್ರ ಸ್ಥಾಪಿಸುವ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆಸಲು ಸಿದ್ಧಪಡಿಸಿದ್ದ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
‘ತಾಂತ್ರಿಕ ಕಾರಣಗಳಿಂದ ಟೆಂಡರ್ ಪ್ರಕ್ರಿಯೆ ರದ್ದುಪಡಿಸಲಾಗಿದೆ ಮತ್ತು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ’ ಎಂದು ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ವರದಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
‘₹1,800 ಕೋಟಿ ಮೊತ್ತದ ಈ ಯೋಜನೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಈ ಹಿಂದಿನ ವಿಚಾರಣೆ ವೇಳೆ ಸರ್ಕಾರ ಭರವಸೆ ನೀಡಿತ್ತು. ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಲು ಈಗ ಏಕಾಏಕಿ ನಿರ್ಧಾರ ಕೈಗೊಂಡಿರುವುದು ಆಘಾತಕಾರಿ’ ಎಂದು ಪೀಠ ಹೇಳಿತು.
‘ನ್ಯಾಯಾಲಯ ಮೇಲ್ವಿಚಾರಣೆ ನಡೆಸುತ್ತಿದ್ದರೂ ಟೆಂಡರ್ ಪ್ರಕ್ರಿಯೆ ರದ್ದುಪಡಿಸಿರುವುದು ಅನುಮಾನ ಹುಟ್ಟಿಸಿದೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.
‘ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಡುವೆ ಆಂಬುಲೆನ್ಸ್ಗಳು ಸಿಲುಕಿಕೊಳ್ಳುತ್ತಿವೆ. ಆಸ್ಪತ್ರೆ ತಲುಪುವುದು ವಿಳಂಬವಾಗಿ ರೋಗಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಮರ್ಪಕ ಆಂಬುಲೆನ್ಸ್ ಸೇವೆಗಾಗಿ ನಿಯಂತ್ರಣಾ ಕೇಂದ್ರ ಸ್ಥಾಪಿಸಲು ನಿರ್ದೇಶನ ನೀಡಬೇಕು’ ಎಂದು ಕೋರಿ ಭಾರತ ಪುನರುತ್ಥಾನ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.